ಜಾರಕಿಹೊಳಿ ಸಿಡಿ ಕೇಸ್: ತನಿಖಾಧಿಕಾರಿ ವರದಿಗೆ ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಅಸ್ತು

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಒಪ್ಪಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: “ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಅವರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ವರದಿಯನ್ನು ನ್ಯಾಯಾಲಯವು ಪರಿಶೀಲಿಸಿದೆ. ಸದರಿ ವರದಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸುವ ಸಂಬಂಧ ಎಸ್ಐಟಿಯು ಹೈಕೋರ್ಟ್ಗೆ ಮನವಿ ಸಲ್ಲಿಸಬಹುದಾಗಿದೆ. ಈ ಮನವಿಯನ್ನು ನ್ಯಾಯಾಲಯವು ಪರಿಗಣಿಸಲಿದೆ” ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಹೇಳಿದೆ.

ಎಸ್ಐಟಿ ರಚನೆಯ ಸಾಂವಿಧಾನಿಕ ಸಿಂಧುತ್ವ ಸೇರಿದಂತೆ ವಿವಿಧ ಕೋರಿಕೆಗಳನ್ನು ಒಳಗೊಂಡು ಸಂತ್ರಸ್ತೆ ಮತ್ತು ಇತರರು ಸಲ್ಲಿಸಿರುವ ಸಂಬಂಧಿತ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಎಸ್ಐಟಿ ಸಿದ್ಧಪಡಿಸಿರುವ ವರದಿಯನ್ನು ಮುಖ್ಯಸ್ಥ ಸೌಮೇಂದು ಮುಖರ್ಜಿ ಪರಿಶೀಲಿಸಿ, ಒಪ್ಪಿಕೊಂಡಿದ್ದಾರೆಯೇ ಎಂದು ತಿಳಿಸುವಂತೆ ಕಳೆದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಎಸ್ಐಟಿಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ “ನವೆಂಬರ್ 26ರಂದು ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಅನುಮೋದಿಸಿದ್ದಾರೆ ಎಂದು ಎಸ್ಐಟಿ ಪರ ವಕೀಲ ಪಿ ಪ್ರಸನ್ನಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಎಸ್ಐಟಿ ಮುಖ್ಯಸ್ಥರು ಮುಚ್ಚಿದ ಲಕೋಟೆಯಲ್ಲಿ ನೀಡಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ” ಎಂದು ಪೀಠವು ಆದೇಶದಲ್ಲಿ ದಾಖಲಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com