ಪುನರ್​ ವಿಂಗಡಣೆ ಸಮಿತಿ ವರದಿ ಮೇಲೆ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ನಿಂತಿದೆ: ಸಚಿವ ಈಶ್ವರಪ್ಪ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಪುನರ್​ ವಿಂಗಡಣೆ ಸಮಿತಿ ವರದಿ ಮೇಲೆ ಈ ಚುನಾವಣಗಳು ನಿಂತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಈಶ್ವರಪ್ಪ
ಈಶ್ವರಪ್ಪ

ಕಲಬುರಗಿ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಪುನರ್​ ವಿಂಗಡಣೆ ಸಮಿತಿ ವರದಿ ಮೇಲೆ ಈ ಚುನಾವಣಗಳು ನಿಂತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಅವರ ಅಧ್ಯಕ್ಷತೆಯಲ್ಲಿರುವ ಪುನರ್​ ವಿಂಗಡಣೆ ಸಮಿತಿಯು ಜನವರಿ ಮೊದಲ ವಾರದಲ್ಲಿ ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇ ಆದರೆ, ಫೆಬ್ರವರಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

“ಲಭ್ಯವಿರುವ ಮಾಹಿತಿಯ ಪ್ರಕಾರ, ಸಮಿತಿಯು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಪುನರ್​ ವಿಂಗಡಣೆಗೆ ಮಾಡಿರುವ ಶಿಫಾರಸುಗಳ ಅಂತಿಮ ಹಂತದಲ್ಲಿವೆ. ಸಮಿತಿಯು ಜನವರಿ ಮೊದಲ ವಾರದಲ್ಲಿ ವರದಿಯನ್ನು ಸಲ್ಲಿಸಲಿದೆ. ಸರ್ಕಾರ ಚುನಾವಣೆ ಮುಂದೂಡುವ ಪರವಾಗಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮುಂಬರುವ ಪರಿಷತ್ ಚುನಾವಣೆ ಕುರಿತು ಮಾತನಾಡಿದ ಅವರು, ‘ಬಿಜೆಪಿ 20 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್‌ಗಿಂತ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯರೇ ಹೆಚ್ಚಾಗಿರುವುದರಿಂದ ಕನಿಷ್ಠ 15-16 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಇದಲ್ಲದೇ ಈ ಬಾರಿ ಎಸ್.ಆರ್.ಪಾಟೀಲ್ ಅವರಂತಹ ಹಿರಿಯ ಎಂ.ಎಲ್.ಸಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿಲ್ಲ.

ಕಾಂಗ್ರೆಸ್ ಗೆ ಹೋಲಿಸಿದರೆ ಈ ಬಾರಿಯ ಚುನಾವಣೆಯಲ್ಲಿ ಮತದಾರರಾಗಿರುವ ಬಿಜೆಪಿ ಶಾಸಕರು, ಸಂಸದರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಂಗ್ರೆಸ್ ನಲ್ಲಿ ಈಗಾಗಲೇ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗಿದ್ದು, ಇದು ಕಾಂಗ್ರೆಸ್ ಮೇಲೆ ಗಂಭೀರ ಪರಿಣಾಮ ಬೀರುವುದಂತೂ ಖಚಿತ ಎಂದಿದ್ದಾರೆ.

ಬಳಿಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಸೇರುವ ಮೂಲಕ ಜೆಡಿಎಸ್‌ಗೆ ಮೋಸ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯುವಂತೆ ಕಾಂಗ್ರೆಸ್ ಹೇಳಿದ್ದೇ ಆದರೆ, ಸಿದ್ದರಾಮಯ್ಯ ಪಕ್ಷವನ್ನೇ ತ್ಯಜಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಈಶ್ವರಪ್ಪ ಅವರು ಹಿಂದುಳಿದ ವರ್ಗಗಳ ಮುಖಂಡರ ರಾಜ್ಯ ಮಟ್ಟದ ಸಮಾವೇಶ ಆಯೋಜಿಸಲು ರಾಜ್ಯ ಪ್ರವಾಸ ಕೈಗೊಂಡಿದ್ದು, ಡಿಸೆಂಬರ್ 12 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸುಮಾರು 3,500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದ್ದಾರೆ.

224 ವಿಧಾನಸಭಾ ಕ್ಷೇತ್ರಗಳ 310 ಮಂಡಲಗಳಿಂದ ಪಕ್ಷವು ತಲಾ 10 ಜನರನ್ನು ಆಯ್ಕೆ ಮಾಡುತ್ತದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ ಕಲ್ಯಾಣ ಕಾರ್ಯಕ್ರಮಗಳ ಕುರಿತು ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗುವುದು. ನಂತರ, ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದಂತೆ ಪ್ರತಿ ಮಂಡಲಗಳಿಂದ ಮೂವರು ಸದಸ್ಯರಿಗೆ ತರಬೇತಿ ನೀಡಲಾಗುವುದು ಮತ್ತು ಸರ್ಕಾರವು ಪ್ರಾರಂಭಿಸಿರುವ ಕಲ್ಯಾಣ ಕ್ರಮಗಳ ಕಿರುಪುಸ್ತಕವನ್ನು ಅವರಿಗೆ ಹಸ್ತಾಂತರಿಸಲಾಗುತ್ತದೆ. ಹಿಂದುಳಿದ ವರ್ಗಗಳು ಮತ್ತು ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಸರ್ಕಾರ ಆರಂಭಿಸಿರುವ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಅವರಿಗೆ ಸೂಚನೆ ನೀಡಲಾಗುತ್ತದೆ. ಇದು ಜಿಪಂ, ತಾ.ಪಂ ಮತ್ತು ಸಾರ್ವತ್ರಿಕ ಚುನಾವಣೆಗೆ ಒಂದು ರೀತಿಯ ತಯಾರಿಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭವಿಷ್ಯದಲ್ಲಿ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ನಿಮಗೂ ಸಿಎಂ ಆಗುವ ಆಸೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಬ್ಬ ರಾಜಕಾರಣಿಯೂ ಮುಖ್ಯಮಂತ್ರಿ ಆಗುವ ಮಹತ್ವಾಕಾಂಕ್ಷೆಯನ್ನು ಹೊಂದಿರುತ್ತಾರೆ, ಆದರೆ, ನಿರಾಣಿಯವರು ತಳಮಟ್ಟದಿಂದ ಬೆಳೆದು ರಾಜ್ಯದಲ್ಲಿ ಹಲವು ಕೈಗಾರಿಕಾ ಕ್ಷೇತ್ರಗಳನ್ನು ಸ್ಥಾಪಿಸಿದ್ದಾರೆ. ನಿರಾಣಿ ಮುಖ್ಯಮಂತ್ರಿಯಾಗುವ ಅರ್ಹತೆಯನ್ನು ಹೊಂದಿದ್ದಾರೆ. ಅಷ್ಟಕ್ಕೂ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸುತ್ತದೆ. ಸದ್ಯಕ್ಕೆ ನೂತನ ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಏಳುವುದಿಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಹೈಕಮಾಂಡ್ ಈಗಾಗಲೇ ಸ್ಪಷ್ಟನೆ ನೀಡಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com