ಮಕ್ಕಳು ಸೇರಿ 11 ಮಂದಿಯಲ್ಲಿ ಕೋವಿಡ್ ಪಾಸಿಟಿವ್: ತುಮಕೂರಿನಲ್ಲಿ ಮತ್ತೊಂದು ಕ್ಲಸ್ಟರ್ ಪತ್ತೆ!
ಒಂದು ವಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.
Published: 05th December 2021 08:17 AM | Last Updated: 05th December 2021 08:30 AM | A+A A-

ಸಂಗ್ರಹ ಚಿತ್ರ
ತುಮಕೂರು/ಹಾಸನ: ಒಂದು ವಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.
ಪೆರುಮನಹಳ್ಳಿ ಗ್ರಾಮದಲ್ಲಿ ಮೂವರು ಮಕ್ಕಳು ಸೇರಿ 11 ಮಂದಿಯಲ್ಲಿ ಶನಿವಾರ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ಮೂಲಕ ತುಮಕೂರಿನಲ್ಲಿ ಮೂರನೇ ಕ್ಲಸ್ಟರ್ ಪತ್ತೆಯಾದಂತಾಗಿದೆ.
ಸೋಂಕಿತರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿದ್ದು, 11 ಮಂದಿಯ ಪೈಕಿ ನಾಲ್ವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಂಗ್ರಹಿಸಲಾದ ಸೋಂಕಿತರ ಮಾದರಿಗಳನ್ನು ಜಿನೋಮ್ ಅನುಕ್ರಮಕ್ಕಾಗಿ ಐಎನ್‌ಎಸ್‌ಎಸಿಒಜಿ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ 41 ಮಂದಿಯನ್ನೂ ಆರ್'ಟಿ-ಪಿಸಿಆರ್ ಪರೀಕ್ಷೆಗೊಳಪಡಿಸಲಾಗುತ್ತಿದೆ.
ಅವರೆಲ್ಲರೂ ಒಂದೇ ಗ್ರಾಮದವರಾಗಿದ್ದು, ಸಂಬಂಧಿಗಳಾಗಿದ್ದಾರೆ. ಇತ್ತೀಚೆಗೆ ತಮ್ಮ ಸಂಬಂಧಿಕರ ಗೃಹಪ್ರವೇಶ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ಮಧುಗಿರಿಗೆ ತೆರಳಿದ್ದರು. ಸಮಾರಂಭಕ್ಕೆ ಹೊರಗಿನಿಂದ ಬಂದ ಜನರೂ ಇದ್ದ ಹಿನ್ನೆಲೆಯಲ್ಲಿ ಈ ಮೂಲಕ ಸೋಂಕು ತಗುಲಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದಲ್ಲದೆ ಜಿಲ್ಲೆಯಲ್ಲಿ ಕೇರಳದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳಲ್ಲೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜನ್ನು ಬಂದ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹಾಸನ ಜಿಲ್ಲೆಯ ಸಕಲೇಶಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನಾಲ್ವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಅಧಿಕಾರಿಗಳು ನಡೆಸಿದ ರ್ಯಾಂಡಮ್ ಪರೀಕ್ಷೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.