ಹ್ಯಾಕರ್ ಜೊತೆ ಪೊಲೀಸರು ಕೈಜೋಡಿಸಿಲ್ಲ, ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬಿಟ್ ಕಾಯಿನ್ ಹಗರಣದಲ್ಲಿ ಯಾರನ್ನೂ ರಕ್ಷಿಸುವ ಅಗತ್ಯ ಸರ್ಕಾರಕ್ಕಿಲ್ಲ. ಸೂಕ್ತ ರೀತಿ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ಬಳಿಕ ಹಗರಣದಲ್ಲಿ ಭಾಗಿಯಾಗಿರುವವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ: ಬಿಟ್ ಕಾಯಿನ್ ಹಗರಣದಲ್ಲಿ ಯಾರನ್ನೂ ರಕ್ಷಿಸುವ ಅಗತ್ಯ ಸರ್ಕಾರಕ್ಕಿಲ್ಲ. ಸೂಕ್ತ ರೀತಿ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ಬಳಿಕ ಹಗರಣದಲ್ಲಿ ಭಾಗಿಯಾಗಿರುವವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಡ್ರಗ್ಸ್ ಕೇಸ್ ಪ್ರಕರಣ ಸಂಬಂಧ ಶ್ರೀಕಿಯನ್ನು ಬಂಧನಕ್ಕೊಳಪಡಿಸಲಾಗಿತ್ತು. ವಿಚಾರಣೆ ವೇಳೆ ಬಿಟ್ ಕಾಯಿನ್ ಹ್ಯಾಕಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದಾನೆಂಬುದು ತಿಳಿದುಬಂದಿತ್ತು. ಶ್ರೀಕಿ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ವೆಬ್ ಪೋರ್ಟಲ್ ಅನ್ನು ಹ್ಯಾಕ್ ಮಾಡಿ ಲಕ್ಷಗಟ್ಟಲೆ ಹಣ ದರೋಡೆ ಮಾಡಿದ್ದ. ಶ್ರೀಕಿ ವಿರುದ್ಧ 4-5 ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಬಿಟ್‌ಕಾಯಿನ್ ಪ್ರಕರಣದಲ್ಲಿ ಪೊಲೀಸರು ಐಐಎಸ್‌ಸಿ ಮತ್ತು ತಜ್ಞರ ಸಹಾಯ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಿದರು.

ರಾಜ್ಯದಲ್ಲಿ 3 ವರ್ಷಗಳಲ್ಲಿ 11 ಪ್ರಕರಣಗಳು ದಾಖಲಾಗಿದ್ದು, ಪ್ರಮುಖ ಆರೋಪಿ ಶ್ರೀಕಿ ಸೇರಿದಂತೆ ಅಪಾದಿತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಒಂದು ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ.

5 ಪ್ರಕರಣ ತನಿಖಾ ಹಂತದಲ್ಲಿದ್ದು, ಬಾಕಿ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಒಂದು ಪ್ರಕರಣದಲ್ಲಿ ರೂ.2.5 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಬಳಿಕ ವೆಂಕಟೇಶ್ ಅವರು ಶ್ರೀಕಿ ತಂದೆ ತಮ್ಮ ಪುತ್ರನಿಗೆ ಪೊಲೀಸರೇ ಡ್ರಗ್ಸ್ ನೀಡಿದ್ದಾರೆಂದು ಹೇಳಿದ್ದರು. ಹೇಳಿಕೆ ಹಿನ್ನೆಲೆಯಲ್ಲಿ ನ್ಯಾಯಾಲಯ ಪರೀಕ್ಷೆಗೊಳಪಡಿಸುವಂತೆ ಸೂಚನೆ ನೀಡಿತ್ತು. ಆದರೆ, ಪೊಲೀಸರು ತಪ್ಪಾದ ಪರೀಕ್ಷೆಗಳನ್ನು ನಡೆಸಿದ್ದಾರೆಂದು ಆರೋಪಿಸಿದರು.

ಈ  ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ಶ್ರೀಕಿಯನ್ನು ಬೆಂಗಳೂರು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು ಆದರೆ ಕೋವಿಡ್ -19 ಪ್ರಕರಣಗಳು ಇದ್ದುದರಿಂದ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಯಿತು. ವೈದ್ಯಕೀಯ ವರದಿ ನೆಗೆಟಿವ್ ಬಂದಿದ್ದು, ದೃಢೀಕರಣಕ್ಕಾಗಿ ಎಫ್‌ಎಸ್‌ಎಲ್ ಲ್ಯಾಬ್‌ಗೆ ಮಾದರಿ ರವಾನಿಸಲಾಗಿತ್ತು. ಅಲ್ಲಿನ ವರದಿ ಕೂಡ ನೆಗೆಟಿವ್ ಬಂದಿತ್ತು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com