1,800 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಗ್ರಾಮಗಳಿಗೂ ನೀರು: ಡಾ.ಸಿ.ಎನ್.ಅಶ್ವತ್ಥನಾರಾಯಣ
ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
Published: 21st February 2021 08:37 AM | Last Updated: 21st February 2021 08:37 AM | A+A A-

ಅಶ್ವತ್ಥ್ ನಾರಾಯಣ್
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನಿಯರ್ ಹಾಗೂ ಉನ್ನತ ಅಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಿ, ಜಿಲ್ಲೆಯಲ್ಲಿ ನದಿ ಮೂಲಗಳ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಎಲ್ಲ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಸೋಮವಾರದೊಳಗೆ ಸಲ್ಲಿಸುವಂತೆ ಸೂಚಿಸಿದರು. ಜಿಲ್ಲೆಗೆ ನದಿ ಮೂಲಗಳಿಂದ ಕುಡಿಯುವ ನೀರಿನ ಪೂರೈಕೆಗಾಗಿ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆ ಎಷ್ಟು ಗ್ರಾಮಗಳಿಗೆ ಈಗಾಗಲೇ ಪೈಪ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ, ಎಷ್ಟು ಗ್ರಾಮಗಳಿಗೆ ಇಲ್ಲ ಎಂಬ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
1,800 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಪ್ರತಿ ಗ್ರಾಮಕ್ಕೂ ಕುಡಿಯುವ ನೀರೊದಿಗಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲ ತಾಲ್ಲೂಕುಗಳಿಗೂ ನೀರು ಲಭ್ಯವಾಗಲಿದೆ. ಈಗಾಗಲೇ ಕಾವೇರಿ ನದಿಯಿಂದ ನೀರು ತರುವ ಯೋಜನೆಯು ಪ್ರಗತಿಯಲ್ಲಿದೆ. ಅದೇ ರೀತಿ ಎತ್ತಿನಹೊಳೆ ಯೋಜನೆಯಿಂದಲೂ ನಮಗೆ ನೀರು ಲಭ್ಯವಾಗಲಿದೆ. ಆ ಯೋಜನೆಗಳು ಮುಗಿಯುವ ಹೊತ್ತಿಗೆ ಜಿಲ್ಲೆಯಲ್ಲಿ ಪ್ರತಿಹಳ್ಳಿಗೂ ನೀರು ಸರಬರಾಜು ಮಾಡುವ ಪೈಪ್ ಲೈನ್ ಜಾಲವನ್ನು ರೂಪಿಸಿರಬೇಕು. ಹೀಗಾಗಿ ಎಲ್ಲ ಕಾಮಗಾರಿಗಳನ್ನು ವೇಗವಾಗಿ , ಭೂ ಸ್ವಾಧೀನ, ಪರಿಹಾರ ನೀಡಿಕೆ ಕೆಲಸಗಳು ಬಾಕಿ ಇದ್ದರೆ ಶೀಘ್ರವೇ ಮುಗಿಸಬೇಕು ಎಂದು ತಾಕೀತು ಮಾಡಿದರು.
ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಮೂಲಕ ನೀರೊದಿಗಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಬಗ್ಗೆಯೂ ಅವರು ಉನ್ನತ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕ ಮಂಜುನಾಥ್ ಅವರೊಂದಿಗೆ ಚರ್ಚೆ ನಡೆಸಿದರು. 2011ರ ಜನಗಣತಿ ಪ್ರಕಾರ ಮಾಗಡಿ ತಾಲ್ಲೂಕಿನಲ್ಲಿ 1.75 ಲಕ್ಷ ಜನಸಂಖ್ಯೆ ಇತ್ತು. ಈಗ 2 ಲಕ್ಷ ದಾಟಿರುವ ಸಾಧ್ಯತೆ ಇದೆ. 2055ಕ್ಕೆ ಎಷ್ಟು ಜನಗಣತಿ ದೃಷ್ಟಿಯಲ್ಲಿ ಇಟ್ಟುಕೊಂಡು ನೀರಾವರಿ ಯೋಜನೆ ರೂಪಿಸಬೇಕು. ತಾಲ್ಲೂಕಿಗೆ ಮಂಚನಬೆಲೆ ಜಲಾಶಯದಿಂದ 0.91 ಟಿಎಂಸಿ, ವೈ.ಜಿ.ಗುಡ್ಡದಿಂದ 0.02 ಟಿಎಂಸಿ ನೀರು ಲಭ್ಯವಾಗಲಿದೆ. ಒಟ್ಟು 81 ಗ್ರಾಮಗಳಿಗೆ 0.21 ಟಿಎಂಸಿ ನೀರು ಸರಬರಾಜು ಮಾಡುವ ಯೋಜನೆ ಇದಾಗಿದೆ. ಯಾವ ಕಾರಣಕ್ಕೂ ಕಾಮಗಾರಿಗಳು ತಡವಾಗಬಾರದು ಎಂದರು.