ನಕಲಿ ವೋಟರ್ ಐಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ: ಹೈಕೋರ್ಟ್
ರಾಜ ರಾಜೇಶ್ವರಿ ನಗರದ ಹಾಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ನಕಲಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ, ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
Published: 21st January 2021 08:58 AM | Last Updated: 21st January 2021 12:51 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ ರಾಜೇಶ್ವರಿ ನಗರದ ಹಾಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ನಕಲಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ, ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮುನಿರತ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ನಗರದ ಎನ್.ಆನಂದ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರಕರಣದ ತನಿಖೆ ಪೊಲೀಸರಿಂದ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.
ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಮುರುಗನ್, ಜಾಲಹಳ್ಳಿ ಠಾಣಾ ಪೊಲೀಸರು ಪ್ರಕರಣ ಕುರಿತು ನಡೆಸಿರುವ ತನಿಖೆಯನ್ನು ಪರಾಮರ್ಶಿಸಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿ ಸಲ್ಲಿಸಿದ್ದಾರೆ.
ಪ್ರಕರಣ ಕುರಿತು ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆಯಲ್ಲಿ ಕೆಲ ಲೋಪಗಳಿವೆ. ಇದೇ ವೇಳೆ ಮುನಿರತ್ನ ವಿರುದ್ಧ ಆರೋಪ ಮಾಡುತ್ತಿರುವ ಅರ್ಜಿದಾರರು ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ. ಅರ್ಜಿದಾರರು ಹಾಗೂ ಮುನಿರತ್ನ ನಡುವೆ ವೈಮನಸ್ಯವಿದೆ ಎಂಬ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಲಾಗಿದೆ.
ವರದಿಯನ್ನು ಪರಿಗಣಿಸಿದ ನ್ಯಾಯಪೀಠ, ಜಾಲಹಳ್ಳಿ ಪೊಲೀಸರು ತನಿಖೆಯಲ್ಲಿ ಮುಂದುವರಿಸಬಹುದು. ತನಿಖೆ ವೇಳೆ ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಬೇಕು. ಅರ್ಜಿದಾರರು ಪೊಲೀಸರ ತನಿಖೆಗೆ ಸಕರಿಸಬೇಕೆಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು. ಜೊತೆಗೆ, ಪ್ರಕರಣ ಕುರಿತು ಜಾಲಹಳ್ಳಿ ಠಾಣೆಯಲ್ಲಿ ದಾಖಲಾದ ಎರಡು ಎಫ್ಐಆರ್ ಗಳ ತನಿಖೆ ಪ್ರಗತಿಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗ ವರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.