ಹಂಪನಾ ವಿರುದ್ಧ ಕ್ರಮ, ರಾಜ್ಯ ಸರ್ಕಾರದ ಕೀಚಕ ನಡೆ ಪ್ರತೀಕ- ಡಿ.ಕೆ.ಶಿವಕುಮಾರ್ ಟೀಕೆ
ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
Published: 22nd January 2021 11:22 PM | Last Updated: 22nd January 2021 11:25 PM | A+A A-

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಬೆಂಗಳೂರು: ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆ ಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಹಾಗೂ ಎಲ್ಲಕ್ಕೂ ಮಿಗಿಲಾಗಿ ಚಿಂತಕ. ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರಕಾರ ಮುಂದಾದದ್ದು ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ.
ಧರ್ಮರಾಯನ ರೀತಿಯಲ್ಲಿ ಬಿಜೆಪಿ ಸರ್ಕಾರ ಬಂದಿತ್ತು. ಆದರೆ, ಇದೀಗ ದುರ್ಯೋಧನ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಹೇಳಿಕೆ ನೀಡಿದ್ದಕ್ಕೆ ಕೆಲ ಬಿಜೆಪಿ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಏನಿದು?ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಪರ ಸಂಘಟನೆಗಳು ಏನು ಮಾಡುತ್ತಿವೆ ಎಂದು ಪ್ರಶ್ನಿಸಿದರು.
ಹಂಪನಾ ರೈತರ ಪ್ರತಿಭಟನೆ ಕುರಿತು ಮಾತನಾಡಿದ್ದಾರೆ. ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ, ದೇಶಾದ್ಯಂತ ಇರುವ ಪರಿಸ್ಥಿತಿ ಹಾಗೂ ದೆಹಲಿಯಲ್ಲಿ ಏನು ನಡೆಯುತ್ತಿದೆಯೋ ಅದರ ಬಗ್ಗೆ ಧ್ವನಿ ಎತ್ತಿದ್ದಾರೆ. ಅಂತವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿರುವುದು ಸಾಹಿತ್ಯ ಕ್ಷೇತ್ರಕ್ಕೆ ಮಾಡಿದ ಅಪಮಾನ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರ ಕ್ರಮವನ್ನು ಖಂಡಿಸಿರುವ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಲ್ಲಾ ಸಾಹಿತಿಗಳು ಮತ್ತು ಕನ್ನಡಿಗರ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಹಂಪ ನಾಗರಾಜಯ್ಯ ಅವರ ಪರವಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.