ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿ: ಸರ್ಕಾರಕ್ಕೆ 'ಹೈ' ಸೂಚನೆ

ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟ ವಿಮೆ ಪರಿಹಾರ ವಿತರಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ವಿಚಾರಣೆಗೆ ಹಾಜರಾಗಿದ್ದ ಅರ್ಜಿದಾರರ ಪರ ವಕೀಲರು ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ್ದ ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರೆ ಅಂತಹ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ, ಸರ್ಕಾರದ ಆದೇಶ ಅಸಮಾನತೆಯಿಂದ ಕೂಡಿದೆ ಎಂದು ಹೇಳಿದರು. 

ರೈತರು ಖಾಸಗಿ ಲೇವಾದೇವಿಗಾರರಿಂದ ಸಾಲ ಪಡೆಯುವ ವೇಳೆ ಅವರು ಲೈಸೆನ್ಸ್ ಪಡೆದಿದ್ದಾರೋ ಇಲ್ಲವೋ ಎಂಬುದನ್ನು ತಿಳಿದಿರುವುದಿಲ್ಲ. ಹೀಗಾಗಿ, ಪರವಾನಿಗೆ ಪಡೆದ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಮೃತಪಟ್ಟ ರೈತರಿಗೆ ಪರಿಹಾರ ನೀಡಿ, ಉಳಿದವರಿಗೆ ಪರಿಹಾರ ನೀಡದೆ ಇರುವುದು ಸರಿಯಲ್ಲ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ಹೈಕೋರ್ಟ್, ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಿದ್ದಾರೆ ಎಂದು ಹೇಳಿತು. 

ಬಳಿಕ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪರವಾನಿಗೆ ಪಡೆದ ಖಾಸಗಿ ಲೇವಾದೇವಿಗಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ನಿರ್ಧರಿಸಿದ್ದು, ಈ ಕುರಿತು ಜುಲೈ 8ರಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ಕೈಗೊಂಡಿರುವ ತೀರ್ಮಾನವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಿದ್ದಾರೆ ಎಂದು ತಿಳಿಸಿತು. ಅಲ್ಲದೇ, ಸರ್ಕಾರ ಇದೀಗ ಹೊರಡಿಸಿರುವ ಆದೇಶದಂತೆ ಅರ್ಹ ರೈತ ಕುಟುಂಬಗಳನ್ನು ಗುರುತಿಸಿ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com