ಕೊರೋನಾ 3ನೇ ಅಲೆಗೆ ಸಿದ್ಧತೆ: ಎಲ್ಲಾ ಜಿಲ್ಲೆಯಲ್ಲೂ ವೈದ್ಯರು, ಸಿಬ್ಬಂದಿಗಳಿಗೆ ತರಬೇತಿ ನೀಡಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ. 

ಖಾಸಗಿ ಹೋಟೆಲ್‌ನಲ್ಲಿ ಇಲಾಖೆಯಿಂದ ಬೆಂಗಳೂರು ನಗರ ಜಿಲ್ಲಾ ವೈದ್ಯರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. 

ಬಳಿಕ ಮಾತನಾಡಿದ ಅವರು, ಮೊದಲ ಅಲೆ ನಿಯಂತ್ರಿಸಲು ಯಶಸ್ವಿಯಾಗಿದ್ದ ನಾವು 2ನೇ ಅಲೆಯಲ್ಲಿ 7 ಪಟ್ಟು ಮೂಲಸೌಕರ್ಯ ಹೆಚ್ಚಳ ಮಾಡಿ 4 ಸಾವಿರ ವೈದ್ಯರ ನೇಮಕ ಮಾಡಿದರೂ ನಿರೀಕ್ಷೆಗೂ ಮೀರಿ ಸಾವು-ನೋವು ಸಂಭವಿಸಿತ್ತು. 3ನೇ ಅಲೆಯಲ್ಲಿ ಈ ರೀತಿ ಆಗದಂತೆ ಎಲ್ಲಾ ಸಿದ್ಧತೆ ನಡೆಸುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಕೊರೋನಾ ನಿರ್ವಹಣೆಗಾಗಿ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ. 

18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. 18 ವರ್ಷಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಈ ವಯೋಮಾನದವರಿಗೆ ಸೋಂಕು ಬಂದರೆ ಮಕ್ಕಳ ತಜ್ಞರ ಬಳಿಯೇ ಹೋಗಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಲಾಗುವುದು.

ತಜ್ಞರು ತರಬೇತಿ ನೀಡುತ್ತಿದ್ದು ಇದನ್ನು ದಾಖಲಿಸಿದರೆ ಅನುಕೂಲವಾಗುತ್ತದೆ. ಆದ್ದರಿಂದ ತರಬೇತಿಯನ್ನು ವಿಡಿಯೋ ರೆಕಾರ್ಡ್‌ ಮಾಡಿ ಎಲ್ಲ ವೈದ್ಯರಿಗೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಡಾ. ದೇವಿಶೆಟ್ಟಿಸಮಿತಿ ಮೂರನೇ ಅಲೆ ಸಿದ್ಧತೆಗೆ ವರದಿ ನೀಡಿದ್ದು, ವರದಿ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕೊರೊನಾ ವೈರಾಣು ರೂಪಾಂತರಗೊಳ್ಳುತ್ತಿದ್ದು, ಮುಂದುವರಿದ ದೇಶಗಳು ಕೂಡ ಎಡವಿರುವುದು ನಿಜ. ಮೊದಲ ಅಲೆಯಲ್ಲಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಿದ್ದೇವೆ. ಎರಡನೇ ಅಲೆಗೆ ಮುನ್ನ ಮೂಲಸೌಕರ್ಯ ಹೆಚ್ಚಿಸಲಾಗಿದೆ. 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ. ಆದರೂ ನಿರೀಕ್ಷೆಗೂ ಮೀರಿ ಸಾವು-ನೋವು ಉಂಟಾಗಿತ್ತು. ಹೀಗಾಗಿ ಮೂರನೇ ಅಲೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಆರೈಕೆಗೆ ವಿಶೇಷ ವಿಭಾಗ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. 

ಹಲವು ದೇಶಗಳಲ್ಲಿ ಈಗಾಗಲೇ 3ನೇ ಅಲೆ ಬಂದಿದೆ. ಮೈ ಮರೆತರೆ ಮೂರನೇ ಅಲೆಯ ಅಪಾಯವನ್ನು ನಾವೇ ಮೈ ಮೇಲೆ ಎಳೆದುಕೊಂಡಂತೆ ಆಗಲಿದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ.70ರಷ್ಟುಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ. ಕೇರಳ, ಮಹಾರಾಷ್ಟ್ರ ಗಡಿ ಹಂಚಿಕೊಳ್ಳುವುದರಿಂದ ಕೊರೋನಾ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂವಾದ ನಡೆಸಿದ್ದು, ದಿನಕ್ಕೆ 5 ಲಕ್ಷ ಡೋಸ್‌ನಂತೆ ತಿಂಗಳಿಗೆ 1.5 ಕೋಟಿ ಡೋಸ್‌ ಲಸಿಕೆ ಪೂರೈಸಲು ಮವನಿ ಮಾಡಿದ್ದಾರೆ. ಮುಂದೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಡೋಸ್‌ ಲಸಿಕೆ ನೀಡುವ ಗುರಿ ಇದೆ. ಈ ತಿಂಗಳಲ್ಲೇ ಹೆಚ್ಚು ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com