8.5 ಕೋಟಿ ರೂ. ವೆಚ್ಚದ ವಸತಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮುಂದಿನ 2 ವರ್ಷಗಳಲ್ಲಿ ರೂ.8,500 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮುಂದಿನ 2 ವರ್ಷಗಳಲ್ಲಿ ರೂ.8,500 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿದ ಈ ಕುರಿತು ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ನಾಲ್ಕು ಲಕ್ಷ ಮತ್ತು ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಬಸವ ಹೌಸಿಂಗ್, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜ ಅರಸು ಯೋಜನೆಯಡಿ ನಾಲ್ಕು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ನಗರ ಪ್ರದೇಶದಲ್ಲಿ ವಾಜಪೇಯಿ ನಗರ ಯೋಜನೆಯಡಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಈ ಸಂಬಂಧ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ. 

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಮತ್ತು ಆಶ್ರಯ ಸಮಿತಿ ಫಲಾನುಭವಿಗಳನ್ನು ಆಯ್ಕೆ ಮಾಡಲಿವೆ. ಮುಂದಿನ ಎರಡು ವರ್ಷದಲ್ಲಿ ಸುಮಾರು ರೂ.8000 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಬೆಂಗಳೂರು ನಗರದಲ್ಲಿ 1 ಲಕ್ಷ ಬಹುಮಹಡಿ ವಸತಿ ಯೋಜನೆಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸಹಿತ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ರೂ.500 ಕೋಟಿ ಒದಗಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ಅಪಾರ್ಟ್‌ಮೆಂಟ್‌ ಗಳಲ್ಲಿ ರೂ.35 ರಿಂದ ರೂ.45 ಲಕ್ಷ ಮೌಲ್ಯದ ಫ್ಲಾಟ್‌ಗಳ ನೋಂದಣಿ ವೇಳೆ ಪಾವತಿಸಬೇಕಾದ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಶೇ 5 ರಿಂದ 3 ಕ್ಕೆ ಇಳಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ದರ ಇಳಿಸಿ, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಸರ್ಕಾರ ನಿರ್ಧಾರ ಕೈಗೊಂಡಿದೆ.ಮಾರ್ಗಸೂಚಿ ದರವನ್ನು ಇಳಿಸಬೇಕು ಎಂಬ ಸಲಹೆ ಬಂದಿದ್ದು, ಅದನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ’ ಎಂದು ಸಚಿವ ಬೊಮ್ಮಾಯಿ ಹೇಳಿದರು.

ಇದಲ್ಲದೆ. ಸಂಪುಟದಲ್ಲಿ ಸಿಎಂ ತವರು ಜಿಲ್ಲೆ ಶಿವಮೊಗ್ಗಕ್ಕೆ ಸಂಬಂಧಪಟ್ಟಂತೆ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. 

ಶಿವಮೊಗ್ಗದ ಮಂಡಿಕೊಪ್ಪದಲ್ಲಿ 9.3 ಎಕರೆ ಬಿ ಖರಾಬ್ ಭೂಮಿಯನ್ನು ಗೋರಕ್ಷಾ ನ್ಯಾಯ ಸಮಿತಿಗೆ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ. 

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಪೆರಿಫರಲ್ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ನಿರ್ಮಿಸಲು ರೂ.50 ಕೋಟಿ ಅನುದಾನಕ್ಕೆ ಸಹಮತ ವ್ಯಕ್ತಪಡಿಸಲಾಗಿದೆ. ಭದ್ರಾವತಿ ಅಟಲ್ ಬಡಾವಣೆಯನ್ನು ಅಕ್ರಮ-ಸಕ್ರಮ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೆ, ಆಯುಷ್ ವಿಶ್ವವಿದ್ಯಾಲಯ ನಿರ್ಮಾಣ ಸಂಬಂಧ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com