ಮುಂಗಾರು ಎಫೆಕ್ಟ್: ಜುಲೈ 26ರವರೆಗೂ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಕರಾವಳಿ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಜುಲೈ.26ರವರೆಗೂ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಜುಲೈ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಗಳೂ ಎದುರಾಗಿವೆ. 

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23-24ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರೆದಿದೆ.

ಜುಲೈ 23ರಂದು ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಈ ನಡುವೆ ಬೆಂಗಳೂರಿನಲ್ಲಿ ನಿನ್ನೆ ಸಂಜೆ 5.30ರವರೆಗೆ 1.7 ಎಂಎಂ ಮಳೆಯಾಗಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಎಂಎಂ, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 0.7 ಎಂಎಂ ಮಳೆಯಾಗಿದೆ ಎಂದು ತಿಳಿದುಬಂದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com