ಕಾಲಮಿತಿಯಲ್ಲಿ ಕೋವಿಡ್ ಲಸಿಕೆ ನೀಡುವ ಯೋಜನೆಯ ಕುರಿತು ವರದಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದ ಎಲ್ಲ ಜನರಿಗೆ ಕಾಲಮಿತಿಯಲ್ಲಿ ಲಸಿಕೆ ನೀಡಲು ರೂಪಿಸಿರುವ ಯೋಜನೆ ಕುರಿತು ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಎಲ್ಲ ಜನರಿಗೆ ಕಾಲಮಿತಿಯಲ್ಲಿ ಲಸಿಕೆ ನೀಡಲು ರೂಪಿಸಿರುವ ಯೋಜನೆ ಕುರಿತು ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. 

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠ ಈ ನಿರ್ದೇಶ ನೀಡಿದೆ.

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಲಸಿಕೆ ಕೊರತೆಯಾಗುವುದಿಲ್ಲ ಎಂದು ತಿಳಿಸಿ ಪ್ರಮಾಣ ಪತ್ರ ಸಲ್ಲಿಸಿದರು. 

ಈ ಹೇಳಿಕೆ ಪರಿಗಣಿಸಿದ ಪೀಠ, ಸೋಂಕಿನ ತೀವ್ರತೆ ತಗ್ಗುತ್ತಿದೆ. ಜತೆಗೆ ಲಸಿಕೆ ನೀಡುವುದನ್ನು ತೀವ್ರಗೊಳಿಸಬೇಕಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜನರಿಗೆ ಲಸಿಕೆಯನ್ನು ನೀಡಲು ಕಾಲಮಿತಿಯ ಯೋಜನೆ ಹಾಕಿಕೊಂಡಿದ್ದರೆ ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

ಅಲ್ಲದೆ, ಈಗಾಗಲೇ ಕಾಲೇಜುಗಳನ್ನು ಆರಂಭಿಸಿರುವುದರಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಶಿಬಿರಗಳನ್ನು ನಡೆಸಲಾಗುತ್ತಿದೆಯೇ ಎಂಬ ಕುರಿತು ವಿವರ ಸಲ್ಲಿಸಬೇಕು. ಈ ಹಿಂದೆ ಪೀಠ ನೀಡಿರುವ ಆದೇಶದಂತೆ ಮೂರನೇ ಸಂಭಾವ್ಯ ಅಲೆ ತಡೆಯಲು ಕೈಗೊಂಡಿರುವ ಕ್ರಿಯಾ ಯೋಜನೆಯ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com