ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್
ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.
Published: 02nd June 2021 09:42 AM | Last Updated: 02nd June 2021 09:42 AM | A+A A-

ಸಚಿವ ಸುಧಾಕರ್
ಬೆಂಗಳೂರು: ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.
ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿಕಾ ಕಾರ್ಯಕ್ರಮವನ್ನು ರದ್ದುಗೊಳಿಸಿ, ಸಮೀಪದ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ರಘು ಅವರು ಪಕ್ಷದ ಕಾರ್ಯಕರ್ತರು ಮತ್ತು ತಮ್ಮ ಸಂಬಂಧಿಕರಿಗೆ ಲಸಿಕೆ ನೀಡಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಸಾರ್ಜಜನಿಕ ಪ್ರದೇಶಗಳಲ್ಲಿ, ಕಲ್ಯಾಣ ಮಂಟಪಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುತ್ತಿರುವ ಲಸಿಕೆಗಳನ್ನು ಆದ್ಯತೆಯ ಆಧಾರದ ಮೇಲೆ ಜನರಿಗೆ ನೀಡಬೇಕು. ಘಟನೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊಂದಿಗೆ ಮಾತುಕತೆ ನಡೆಸುತ್ತೇನೆ. ಒಂದು ವೇಳೆ ತಪ್ಪುಗಳಾಗಿರುವುದು ಕಂಡು ಬಂದಿದ್ದೇ ಆದರೆ, ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ.