ಎಸ್ಎಸ್ಎಲ್'ಸಿ ಪರೀಕ್ಷೆಗೆ ಸರ್ಕಾರದಿಂದಲೇ ಮಿಶ್ರ ಪ್ರತಿಕ್ರಿಯೆ: ಜುಲೈನಲ್ಲಿ ನಡೆಯಲಿದೆಯೇ ಪರೀಕ್ಷೆ? 

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿರುವ ಸಚಿವ ಸುರೇಶ್ ಕುಮಾರ್ ಅವರು, ಜುಲೈ ತಿಂಗಳಿನಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದ್ದು, ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಸರ್ಕಾರದಿಂದಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿರುವ ಸಚಿವ ಸುರೇಶ್ ಕುಮಾರ್ ಅವರು, ಜುಲೈ ತಿಂಗಳಿನಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದ್ದು, ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಸರ್ಕಾರದಿಂದಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಿಜಕ್ಕೂ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಯಲಿದೆಯೇ ಎಂಬ ಅನುಮಾನಗಳು ಮೂಡತೊಡಗಿವೆ. 

ಸುರೇಶ್ ಕುಮಾರ್ ಅವರು ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಪ್ರಕಟಣೆ ಹೊರಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೊರೋನಾ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವೇ ಸರ್ಕಾರ ಪರೀಕ್ಷೆ ನಡೆಸಲಿದೆ. ಒಂದು ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ಪರೀಕ್ಷೆ ರದ್ದುಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸುರೇಶ್ ಕುಮಾರ್ ಅವರು, ಗಣ್ಯರು, ಶಿಕ್ಷಣ ತಜ್ಞರು, ಹಿಂದಿನ ಶಿಕ್ಷಣ ಸಚಿವರು, ಮಾಧ್ಯಮ ಮಿತ್ರರು, ಮುಖ್ಯಮಂತ್ರಿ ಹಾಗೂ ಸಚಿವರು ಸೇರಿ ಸಮಾಜದ ವಿವಿಧ ಸ್ತರದ ಹಲವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಕೋವಿಡ್ ನಿಂದಾಗಿ ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳ ಹಿಂದಿನ ಸಾಲಿನ (9ನೇ ತರಗತಿ) ಕಲಿಕಾ ಗುಣಮಟ್ಟದ ಮಾನದಂಡ ನಮ್ಮಲ್ಲಿ ಇಲ್ಲದಿರವ ಕಾರಣ ಎಸ್ಎಸ್ಎಲ್'ಸಿ ಪರೀಕ್ಷೆಯನ್ನು ಪ್ರಸ್ತುತ ಸಾಲಿಗೆ ಸರಳೀಕರಿಸಿ ಒಂದು ದಿನ ಕೋರ್ ವಿಷಯಗಳು, ಮತ್ತೊಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲಾಗುತ್ತದೆ. ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. 

ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆ ಪತ್ರಿಕೆ ನೀಡಲಾಗುವುದು. 3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು, ಪರೀಕ್ಷಾ ಸಮಯವನ್ನು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ವೇಳಾಪಟ್ಟಿಯನ್ನು ಪರೀಕ್ಷೆಗೆ 15 ದಿನ ಮೊದಲೇ ಪ್ರಕಟಿಸಲಾಗುವುದು. ಪರೀಕ್ಷಾ ಕೇಂದ್ರ ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ ಒಂದು ಡೆಸ್ಕ್'ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕಳುತಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗುವುದು. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದು ವಿವರಿಸಿದರು. 

ಎರಡು ದಿನ ಪರೀಕ್ಷೆಯಲ್ಲಿ ಪ್ರತಿ ವಿಷಯದ 40 ಅಂಕದ ಪ್ರಶ್ನೆಗಳಿಗೆ ಉತ್ತರಿಸಿ ವಿದ್ಯಾರ್ಥಿಗಳು ಪಡೆದ ಫಲಿತಾಂಶವನ್ನು ಪ್ರತಿ ವಿಷಯಕ್ಕೆ ಗರಿಷ್ಠ 80 ಅಂಕಗಳಿಗೆ ಪರಿವರ್ತಿಸಿ ಪ್ರತಿ ವರ್ಷದಂತೆ ಇಂಟರ್ನಲ್ ಅಂಕಗಳನ್ನೂ ಸೇರಿಸಿ ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಯಾವುದೇ ವಿದ್ಯಾರ್ಥಿಯನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಇದೇ ವೇಳೆ ಪರೀಕ್ಷೆ ಆಯೋಜನೆ ಸಮಯ ಜುಲೈ 3ನೇ ವಾರ ಎಂಬುದು ಅಂತಿಮವಲ್ಲ. ಕೋವಿಡ್ ತಹಬದಿಗೆ ಬರದಿದ್ದರೆ ನಿರ್ಧಾರವನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಿದರು. 

ಸರ್ಕಾರದ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮೇಶ್ ಕುಮಾರ್ ಅವರು, ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ಕೊರೋನಾ ಸೋಂಕು ತಗುಲಿದ್ದೇ ಆದರೆ, ಸರ್ಕಾರವೇ ಜವಾಬ್ದಾರಿ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. 

 ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸುವುದು ಉತ್ತಮ ಎಂದು ಹೇಳಿದ್ದಾರೆ. ಪರೀಕ್ಷೆಗೂ 20 ದಿನಕ್ಕೂ ಮೊದಲೇ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳ ಕಲಿಕಾ ಗುಣಮಮಟ್ಟ ಅಳೆಯಲು ನಮ್ಮ ಬಳಿ ಯಾವುದೇ ಮಾನದಂಡಗಳು ಇಲ್ಲದ ಕಾರಣ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com