ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ: ಸಚಿವ ಸುರೇಶ್ ಕುಮಾರ್

ಇಂದಿನ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು: ಇಂದಿನ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕರ್ನಾಟಕ‌ ಪ್ರೌಢ ಶಿಕ್ಷಣ‌ ಪರೀಕ್ಷಾ ಮಂಡಳಿಯ ವತಿಯಿಂದ‌ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯುಸಿ ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕ ಪರಿಗಣಿಸಿ: ಈ‌ ಬಾರಿಯ ದ್ವಿತೀಯ ಪಿಯು ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದ್ದು, ವೃತ್ತಿಪರ‌ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ ಪಿಯು ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್ ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ಸಚಿವ ಸುರೇಶ್ ಕುಮಾರ್ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ‌ ಸಚಿವರಾದ ಡಾ.ಅಶ್ವತ್ಥ ನಾರಾಯಣ್ ಅವರನ್ನು ಕೋರಿದ್ದಾರೆ. ಈ ಬಗ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಸಾಮಾನ್ಯವಾಗಿ ದ್ವಿತೀಯ ಪಿಯು ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತ‌ಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ. ಹಾಗಾಗಿ, ಈ ಬಾರಿಯ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶವನ್ನು ಸಿ.ಇ.ಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಅನನುಕೂಲವಾಗಬಹುದು ಎಂಬುದನ್ನು ಗಮನಿಸಬೇಕಾಗುತ್ತದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಬಾರಿಗೆ ಸೀಮಿತಗೊಂಡಂತೆ ತಮ್ಮ ಇಲಾಖೆಯು ನಡೆಸಲು‌ ಉದ್ದೇಶಿಸಿರುವ ವೃತ್ತಿಪರ ಕೋರ್ಸ್ ದಾಖಲಾತಿಗೆ ಸಂಬಂಧಿಸಿದ ಸಿ.ಇ.ಟಿ.ಪರೀಕ್ಷೆಗೆ ವೇಟೇಜ್ ನೀಡುವ ಪ್ರಕ್ರಿಯೆಯನ್ನು ತಾವು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರಾಂಕಿಂಗ್ ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com