ರಾಜ್ಯದಲ್ಲಿ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಗುರುವಾರ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಗುರುವಾರ ಮಾಹಿತಿ ನೀಡಿದೆ.

ಕೋರನ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 1,947 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 157 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರ 22,050 ಚುಚ್ಚುಮದ್ದು ಹಂಚಿಕೆ ಮಾಡಿದ್ದು, ಈವರೆಗೆ 19,950 ಡೋಸ್‍ಗಳನ್ನು ತಲುಪಿಸಿದೆ ಎಂದು ಪೀಠಕ್ಕೆ ತಿಳಿಸಿದರು.

ಪ್ರತಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ 6 ರಿಂದ 8 ವಾರಗಳಲ್ಲಿ 30 ವಯಲ್ಸ್ ನೀಡುವುದು ಅಗತ್ಯವಿದೆ. ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್ ಜೂನ್ 9ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಬ್ಲ್ಯಾಕ್ ಫಂಗಸ್‍ಗೆ ಔಷಧ ಪಡೆಯಲು ಕೇಂದ್ರ ಸರಕಾರ ಪ್ರಪಂಚದ ಹಲವು ದೇಶಗಳನ್ನು ಸಂಪಕಿರ್ಸಿದೆ. ತಜ್ಞರೊಂದಿಗೆ ಸಮಾಲೋಚನೆ ನಡೆಸಿದೆ. ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಚುಚ್ಚುಮದ್ದು ಸಹ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಐಸಿಎಂಆರ್ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಆಸ್ಪತ್ರೆಗಳಿಗೂ ತಲುಪಿಸಬೇಕು. ರಾಜ್ಯ ಸರಕಾರ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸುವಂತೆ ಕೇಂದ್ರಕ್ಕೆ ನಿಯಮಿತವಾಗಿ ಬೇಡಿಕೆ ಸಲ್ಲಿಸಬೇಕು. ಅದರಂತೆ ಕೇಂದ್ರ ಸರಕಾರ ಔಷಧ ಮತ್ತು ಚುಚ್ಚುಮದ್ದು ಪೂರೈಸಬೇಕು. ಮುಂದಿನ ವಿಚಾರಣೆ ಸಂದರ್ಭದಲ್ಲಿ ರಾಜ್ಯದಲ್ಲಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಅಂಕಿ ಅಂಶಗಳ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com