ವಲಸಿಗರ ಮರಳುವಿಕೆಯಿಂದ ರಾಜ್ಯದಲ್ಲಿ ಮತ್ತೆ ಸೋಂಕು ಹೆಚ್ಚಳ ಭೀತಿ: ರೈಲು, ಬಸ್ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ನಿರ್ಧಾರ

ಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಂದ ಬರುವ ವಲಸಿಗರಿಗೆ ರೈಲ್ವೇ ಹಾಗೂ ಬಸ್ ನಿಲ್ದಾಣಗಳಲ್ಲೇ ಕೋವಿಡ್ ಪರೀಕ್ಷೆಗೊಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಲಾಕ್ಡೌನ್ ಸಡಿಲಿಕೆಯಾದ ಬಳಿಕ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ. ಬೆಂಗಳೂರು ನಗರಕ್ಕೆ ಹೆಚ್ಚಿನ ಜನರು ವಾಪಸ್ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗಳನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಲಾಕ್ಡೌನ್ ಬಳಿಕ ಬೆಂಗಳೂರಿನಿಂದ ಗ್ರಾಮೀಣ ಪ್ರದೇಶಗಳಿಗೆ ಹೋಗುತ್ತಿರುವ ಜನರ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿತ್ತು. ಇದೀಗ ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ವಾಪಸ್ಸಾಗುತ್ತಿರುವುದರಿಂದ ನಗರದಲ್ಲಿ ಸೋಂಕು ಹೆಚ್ಚಾಗುವ ಭೀತಿ ಶುರುವಾಗಿದೆ. ಹೀಗಾಗಿ ಸೋಂಕು ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. 

ಲಾಕ್ಡೌನ್ ಜಾರಿಯಾದ ಬಳಿಕ ಕೆಲ ದಿನಗಳಿಂದ ಬೆಂಗಳೂರು ಹಾಗೂ ಇತರೆ ಗ್ರಾಮೀಣ ಭಾಗಗಳಲ್ಲಿ ಸೋಂಕು ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ಆದರೆ, ಹಲವು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಇನ್ನೂ ಹೆಚ್ಚಾಗಿಯೇ ಇದೆ. ಜೂನ್. 14 ರಿಂದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಸಡಿಲಗೊಳಿಸಲಾಗಿದೆ. ಸೋಂಕು ಹರಡದಂತೆ ಜನರೂ ಕೂಡ ಸರ್ಕಾರಕ್ಕೆ ಸಹಕಾರ ನೀಡಬೇಕು. ಆರ್ಥಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೆಲವು ವಲಯಗಳಿಲ್ಲಿ ಲಾಕ್ಡೌನ್ ಸಡಿಲಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com