ಇಂಟರ್ನೆಟ್ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿಗಳಿಗೆ ಸುರೇಶ್ ಕುಮಾರ್ ಮನವಿ
ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ಮತ್ತು ನೆಟ್ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
Published: 22nd June 2021 12:42 PM | Last Updated: 22nd June 2021 01:02 PM | A+A A-

ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್‍ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ಮತ್ತು ನೆಟ್ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಗ್ರಾಮೀಣ ಪ್ರದೇಶದಲ್ಲಿ ನೆಟ್ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್‍ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನೆಟ್ವರ್ಕ್ ಸಮಸ್ಯೆಗೆ ಕೊನೆ ಹಾಡಲು ನೆಟ್ವರ್ಕ್ ಆಪರೇಟರ್ ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಇಂದಿನ ಸಂದರ್ಭವನ್ನು ಗಮನಿಸಿದರೆ ಕೊವಿಡ್ ಕಾಲಘಟ್ಟದಲ್ಲಿ ಆನ್‍ಲೈನ್ ತರಗತಿಗಳೇ ಸಾಮಾನ್ಯವಾಗಬಹುದಾಗಿದೆ. ಕೊವಿಡ್ ಪೂರ್ವದ ಸಹಜ ಸಾಮಾಜಿಕ ಸ್ಥಿತಿಗತಿಗಳು ಸದ್ಯಕ್ಕೆ ಹಿಂದಿರುಗಲು ಸಾಧ್ಯವಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಈ ಹೊಸ ಸ್ಥಿತಿಗೆ ಹೊಂದಿಕೊಳ್ಳದೇ ಅನ್ಯದಾರಿಯಿಲ್ಲವಾದ್ದರಿಂದ ನಾವು ಅಂತರ್ಜಾಲ ನೆಟ್ವರ್ಕ್ ಸಮಸ್ಯೆಯನ್ನು ಪರಿರಿಸಿಕೊಳ್ಳಲೇಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.