ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಘೋರ ದುರಂತ: ಆಕ್ಸಿಜನ್ ಕೊರತೆಯಿಂದ ಒಂದೇ ದಿನ 24 ರೋಗಿಗಳು ಸಾವು!

ದೇಶದ ರಾಜಧಾನಿ ದೆಹಲಿಯ ಪರಿಸ್ಥಿತಿಯೇ ಕರ್ನಾಟಕಕ್ಕೂ ಬಂದಿದೆ. ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತ ರೋಗಿಗಳು ಸೇರಿದಂತೆ ಇತರ 24 ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ಜಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಚಾಮರಾಜನಗರ ಆಸ್ಪತ್ರೆ
ಚಾಮರಾಜನಗರ ಆಸ್ಪತ್ರೆ

ಚಾಮರಾಜನಗರ: ದೇಶದ ರಾಜಧಾನಿ ದೆಹಲಿಯ ಪರಿಸ್ಥಿತಿಯೇ ಕರ್ನಾಟಕಕ್ಕೂ ಬಂದಿದೆ. ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತ ರೋಗಿಗಳು ಸೇರಿದಂತೆ ಒಟ್ಟು 24 ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ಜಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಇದರಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ ಆರ್ ರವಿ ತಿಳಿಸಿದ್ದಾರೆ.

ಕಳೆದ ರಾತ್ರಿ 16 ಮಂದಿ ರೋಗಿಗಳು ಮೃತಪಟ್ಟಿದ್ದರೆ ಇಂದು ನಸುಕಿನ ಜಾವ 4ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಆಕ್ಸಿಜನ್ ಇಲ್ಲದೆ ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬರುವ ಹೊತ್ತಿಗೆ ರೋಗಿಗಳ ಪ್ರಾಣಪಕ್ಷಿ ಹಾರಿಹೋಗಿತ್ತು. ತಮ್ಮವರನ್ನು ಕಳೆದುಕೊಂಡ ಮನೆಯವರು, ಸಂಬಂಧಿಕರ ಆಕ್ರಂದರ ಮುಗಿಲು ಮುಟ್ಟುವಂತಿತ್ತು.

ದುರ್ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಆಸ್ಪತ್ರೆಗೆ ತೆರಳಿ ಪರಿಸ್ಥಿತಿ ಅವಲೋಕಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ನಾಳೆ ತುರ್ತು ಸಚಿವ ಸಂಪುಟ ಸಭೆ: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟು ಆದ ದುರ್ಘಟನೆ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಸಚಿವ ಸಂಪುಟ ಸಹೋದ್ಯೋಗಿಗಳ ತುರ್ತು ಸಭೆ ಕರೆದಿದ್ದಾರೆ. ಘಟನೆ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿ ಮುಖ್ಯಮಂತ್ರಿಗಳು ಮಾಹಿತಿ ಪಡೆದಿದ್ದಾರೆ.  

ಸಾರ್ವಜನಿಕರ ಆಕ್ರೋಶ: ಜಿಲ್ಲಾಡಳಿತ ಮತ್ತು ಸರ್ಕಾರದ ವೈಫಲ್ಯದಿಂದ ಸಾಮಾನ್ಯ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com