ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಇಂಗಿತ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೋವಿಡ್ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಕಾಯ್ದೆಯಡಿ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಲು ಒಲವು ತೋರಿರುವುದಾಗಿ ಹೈಕೋರ್ಟ್ ತಿಳಿಸಿದೆ.
Published: 05th May 2021 11:58 AM | Last Updated: 05th May 2021 01:24 PM | A+A A-

ಚಾಮರಾಜನಗರ ಜಿಲ್ಲಾಸ್ಪತ್ರೆ ಮುಂದೆ ದುಃಖತಪ್ತ ಸಂಬಂಧಿಕರು
ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೋವಿಡ್ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಕಾಯ್ದೆಯಡಿ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಲು ಒಲವು ತೋರಿರುವುದಾಗಿ ಹೈಕೋರ್ಟ್ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರ್ಘಟನೆಗೆ ಗಂಭೀರತೆಯನ್ನು ಮನಗಂಡು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯನ್ನು ನಡೆಸಲು ಈ ಕೇಸು ಅರ್ಹವಾಗಿದೆ ಎಂದು ನಮಗೆ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದರು.
ಆಕ್ಸಿಜನ್ ಕೊರತೆಯಿಂದ ರಾಜ್ಯದ ಇತರ ಭಾಗಗಳಲ್ಲಿ ಕೂಡ ರೋಗಿಗಳು ಮೃತಪಡುತ್ತಿರುವುದು ಆತಂಕಕಾರಿ ಸಂಗತಿ ಎಂದು ನ್ಯಾಯಾಲಯ ಹೇಳಿದೆ. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವಡಗಿ, ದುರ್ಘಟನೆಗೆ ಕಾರಣರಾದವರನ್ನು ಗುರುತಿಸಲು ಸರ್ಕಾರ ಗಂಭೀರವಾಗಿದ್ದು ನ್ಯಾಯಾಂಗ ತನಿಖೆಗೆ ಸರ್ಕಾರದ ಕಡೆಯಿಂದ ಯಾವುದೇ ಆಕ್ಷೇಪವಿಲ್ಲ ಎಂದರು. ಸರ್ಕಾರದ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದ್ದು ಇಂದು ಸಾಯಂಕಾಲದೊಳಗೆ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಹೇಳಿದರು.