ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜತೆ ಚರ್ಚಿಸಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಸಭೆ ನಡೆಸಿ ಕೋವಿಡ್ ಸೋಂಕಿನ...
Published: 05th May 2021 04:15 PM | Last Updated: 05th May 2021 04:15 PM | A+A A-

ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಸಭೆ ನಡೆಸಿ ಕೋವಿಡ್ ಸೋಂಕಿನ ಕುರಿತು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ಕೊರೋನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಆಕ್ಸಿಜನ್, ಬೆಡ್, ವೆಂಟಿಲೇಟರ್ ಗಳ ಕೊರತೆ, ಇದಕ್ಕೆ ಪ್ರತಿಯಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದರು.
ಅದೇ ರೀತಿ ಜನರ ಸೋಂಕಿತರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಸಲಹೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆಗೆ ಸಭೆ ನಡೆಸಿದ್ದು, ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವಾಗುತ್ತಿದೆ. ಆಕ್ಸಿಜನ್ ಸಿಗದೆ ಚಾಮರಾಜನಗರದಲ್ಲಿ 28 ಜನ ಸಾವಾಗಿದೆ. ಆದರೆ ಸಚಿವ ಸುಧಾಕರ 3 ಜನ ಎಂದು ಹೇಳಿರುವುದು ಶುದ್ಧ ಸುಳ್ಳು. ಈ ಸಂಬಂಧ ಡಿ.ಕೆ ಶಿವಕುಮಾರ್ ಜೊತೆಗೂಡಿಸಿ, ಚಾಮರಾಜನಗರ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದಾಗ ಆಕ್ಸಿಜನ್ ಕೊರತೆಯಿಂದ ಸಾವಾಗಿರುವ ಬಗ್ಗೆ ನಮಗೆ ಮಾಹಿತಿ ನೀಡಿದ್ದಾರೆ. ಆದರೆ ಆರೋಗ್ಯ ಸಚಿವರು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದರು.
ಚಾಮರಾಜನಗರದಲ್ಲಿ ಪ್ರತಿರೋಗಿಗೆ 350 ಆಕ್ಸಿಜನ್ ಸಿಲಿಂಡರ್ ಅಗತ್ಯವಿತ್ತು. ಆದರೆ ಮೃತಪಟ್ಟ ಭಾನುವಾರ ದಿನ ಕೇವಲ 126 ಸಿಲಿಂಡರ್‌ಗಳು ಮಾತ್ರ ಪೂರೈಕೆಯಾಗಿದೆ. ಮೇ 2ರಿಂದ 3ನೇ ತಾರೀಖಿನವರೆಗೆ 28 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳಿಗೆ ತಿಳಿಸಿದ್ದೇವೆ ಎಂದರು.