ಸಿಎಂ ಯಡಿಯೂರಪ್ಪ ನಿವಾಸಕ್ಕೆ ಬಿ.ಎಲ್‌. ಸಂತೋಷ್‌ ಭೇಟಿ: ಕೋವಿಡ್‌ ನಿರ್ವಹಣೆ ಬಗ್ಗೆ ಚರ್ಚೆ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರು ರಾಜ್ಯದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚೆ ನಡೆಸಿದರು.
ಬಿ.ಎಲ್‌.ಸಂತೋಷ್‌
ಬಿ.ಎಲ್‌.ಸಂತೋಷ್‌

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರು ರಾಜ್ಯದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚೆ ನಡೆಸಿದರು. 

ಮಂಗಳವಾರ ಬೆಳಗ್ಗೆ ಸಿಎಂ ನಿವಾಸಕ್ಕೆ ತೆರಳಿ ಉಪಹಾರ ಸೇವಿಸಿದ ಅವರು, ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕೈಗೊಳ್ಳುತ್ತಿರುವ ಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಿಎಲ್‌ ಸಂತೋಷ್‌ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, ಸಂತೋಷ್‌ ಅವರೊಂದಿಗೆ ಕೋವಿಡ್‌ ನಿರ್ವಹಣೆ ಬಗ್ಗೆ ಒಂದು ಗಂಟೆ ಸುದೀರ್ಘ ಚರ್ಚೆ ಮಾಡಲಾಗಿದೆ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರಕಾರದ ಸಂಪೂರ್ಣ ಸಹಕಾರ ದೊರಕಲಿರುವುದರ ಬಗ್ಗೆಯೂ ಅವರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆಯಿಂದ ಹಲವರು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಟೀಕೆ ಹಾಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಪಕ್ಷದ ನಾಯಕರು ಒಗ್ಗೂಡಿ ಜನರ ನೆರವಿಗೆ ಮುಂದಾಗಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಮೂಲಕ ಜನರಲ್ಲಿ ವಿಶ್ವಾಸ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. 

ಕೆಲ ದಿನಗಳ ಹಿಂದಷ್ಟೇ ಕೋರ್ ಕಮಿಟಿ ಸಭೆಯನ್ನು ನಡೆಸಿದ್ದ ಬಿಜೆಪಿ ನಾಯಕರು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಪಕ್ಷ ಹಾಗೂ ಸರ್ಕಾರ ಒಗ್ಗೂಡಿ ಕೆಲಸ ಮಾಡುವ ನಿರ್ಧಾರಕ್ಕೆ ಬರಲಾಗಿತ್ತು. 

ಬಳಿಕ ಸೋಮವಾರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಕೈಗೊಂಡಿರುವ ಕಾರ್ಯಚಟುವಟಿಕೆಗಳ ಬಗ್ಗೆ ವಿವರಣೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com