ಶಾಲೆಗಳ ಆರಂಭಕ್ಕೂ ಮುನ್ನ ನಮ್ಮ ಬೇಡಿಕೆಗಳ ಈಡೇರಿಸಿ: ಖಾಸಗಿ ಶಾಲೆಗಳ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ರಾಜ್ಯದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಖಾಸಗಿ ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ಲಸಿಕೆ ನೀಡುವುದು, ವಿಶೇಷ ಪ್ಯಾಕೇಜ್ ಘೋಷಣೆ ಮತ್ತು ವಿದ್ಯಾರ್ಥಿಗಳ ದಾಖಲಾತಿಗೆ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ರಾಜ್ಯದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.

ಖಾಸಗಿ ಶಾಲಾಡಳಿತ ಮಂಡಳಿಗಳ ಸಂಘಟನೆಗಳಾದ ಕ್ಯಾಮ್ಸ್, ರುಪ್ಸಾ, ಕುಸ್ಮಾ, ಅಲ್ಪಸಂಖ್ಯಾತ ಶಾಲೆಗಳ ಒಕ್ಕೂಟ ಸೋಮವಾರ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿವೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ‘ಜೂನ್ 15ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಈಗಾಗಲೇ ಸರ್ಕಾರ ತಿಳಿಸಿದೆ. ಆನ್‌ಲೈನ್‌ನಲ್ಲಿ ತರಗತಿ ನಡೆಸಲು ನಾವು ತಯಾರಿದ್ದೇವೆ. ಆದರೆ, ಇದಕ್ಕೂ ಮೊದಲು ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಕೋವಿಡ್‌ ಲಸಿಕೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಶೇ.2 ರಷ್ಟು ಮಕ್ಕಳು ಮಾತ್ರ ದಾಖಲಾಗಿದ್ದಾರೆ. ಜೂನ್ 7 ರ ಬಳಿಕ ರಾಜ್ಯ ಸರ್ಕಾರ ಲಾಕ್ಡೌನ್ ತೆಗೆಯಲಿದ್ದು, ಜೂನ್ 15ರಿಂದ ಶಾಲೆಗಳು ಆರಂಭವಾಗಲಿವೆ. ಪೋಷಕರಿಗೆ ಶುಲ್ಕ ಕಟ್ಟಲು ಸಮಯವಿಲ್ಲ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲು ಕಡ್ಡಾಯಗೊಳಿಸಬೇಕಿದೆ. ಒಂದರಿಂದ 10ನೇ ತರಗತಿಯವರೆಗೂ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆಗೆ ಪ್ರವೇಶ ಪಡೆಯುವಂತೆ ಆದೇಶ ಹೊರಡಿಸಬೇಕು. ಶುಲ್ಕ ಬಿಕ್ಕಟ್ಟು ಪರಿಹಾರ ಕಲ್ಪಿಸಬೇಕು. ನೇರ ಅಥವಾ ಆನ್‌ಲೈನ್ ಎರಡರಲ್ಲಿ ಒಂದಕ್ಕೆ ಕಡ್ಡಾಯವಾಗಿ ಹಾಜರಾತಿ ಇರಬೇಕು. ಈ ಬಗ್ಗೆ ಸ್ಪಷ್ಟ ಆದೇಶ ಹೊರಡಿಸದ ಹೊರತು ಶಾಲೆಗಳನ್ನು ಆರಂಭಿಸುವುದಿಲ್ಲ’ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com