ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗ ಜುಲೈನಲ್ಲಿ ಪ್ರಯಾಣಿಕರ ಓಡಾಟಕ್ಕೆ ಮುಕ್ತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
Published: 26th May 2021 07:51 AM | Last Updated: 26th May 2021 01:10 PM | A+A A-

ಸಿಎಂ ಯಡಿಯೂರಪ್ಪ
ಬೆಂಗಳೂರು: ನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ಮಂಗಳವಾರ ವಿಧಾನಸೌಧದ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ನಿಲ್ದಾಣದಿಂದ ವಿಶೇಷ ಮೆಟ್ರೋ ಏರಿದ ಮುಖ್ಯಮಂತ್ರಿಗಳು ಅಲ್ಲಿಂದ ನಾಯಂಡಹಳ್ಳಿ, ರಾಜರಾಜೇಶ್ವರಿ ನಿಲ್ದಾಣ, ಕೆಂಗೇರಿ ನಿಲ್ದಾಣಗಳನ್ನು ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜುಲೈನಲ್ಲಿ ಕಾರ್ಯಾರಂಭ ಮಾಡಲಿದೆ. ಈ ವಿಸ್ತರಿತ ಮಾರ್ಗದಿಂದ 75 ಸಾವಿರ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಒಟ್ಟು 7.53 ಕಿ.ಮೀ. ಉದ್ದದ ಈ ವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚ ತಗುಲಿದೆ. ಭೂ-ಸ್ವಾಧೀನಕ್ಕೆ 360 ಕೋಟಿ ರೂ. ವೆಚ್ಚವಾಗಿದೆ. ಇದರಿಂದಾಗಿ ಪೂರ್ವ-ಪಶ್ಚಿಮ ಕಾರಿಡಾರ್ ಮಾರ್ಗದ ಉದ್ದ 18.1 ಕಿ.ಮೀ. ಗೆ ಹೆಚ್ಚಳವಾಗಿದೆ. ಇದರಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್-ಟರ್ಮಿನಲ್ ಹಾಗೂ ಕೆಂಗೇರಿ - ಒಟ್ಟು 6 ನಿಲ್ದಾಣಗಳಿವೆ. ಇದರಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಕೆಂಗೇರಿ ಬಸ್-ಟರ್ಮಿನಲ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.