ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುಂದಿನ ಮೂರು ದಿನ ಭಾರೀ ಮಳೆ
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ .
Published: 06th November 2021 10:03 AM | Last Updated: 06th November 2021 01:58 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣದರು.
ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಸಹ ಕಡಿಮೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯುಂಟಾಗುತ್ತಿದೆ. ಇನ್ನುಳಿದಂತೆ ರಾಜ್ಯದಲ್ಲಿ ಚಳಿಗಾಲ ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ
ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಹೊರಗೆ ಬಂದಿದ್ದ ಜನ ಮಳೆಯಲ್ಲಿ ಸಿಲುಕಿದರು. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ವಾಹನ ಸವಾರರು ಫ್ಲೈ ಓವರ್ ಕೆಳಗೆ ಆಶ್ರಯ ಪಡೆದಿದ್ರು.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.