ಬಿಐಎಎಪಿಎ ಅಧ್ಯಕ್ಷರಾಗಿ ಸಚಿವ ಅಶೋಕ್ ಸಂಬಂಧಿ ರವಿ ನೇಮಕ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಾಹಿತಿ ಹಕ್ಕು ಕಾರ್ಯಕರ್ತ ಟಿ ನರಸಿಂಹಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ಪ್ರಕಟಿಸಿತು.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕಂದಾಯ ಸಚಿವ ಆರ್ ಅಶೋಕ್ ಸಂಬಂಧಿ ಎ.ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ (ಬಿಐಎಎಪಿಎ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಟಿ ನರಸಿಂಹಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ಪ್ರಕಟಿಸಿತು. ಯಾವುದೇ ಮೆರಿಟ್ ಇಲ್ಲದಿರುವುದರಿಂದ ಮನವಿ ವಜಾ ಮಾಡಲಾಗಿದೆ ಎಂದು ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಸಚಿವ ಆರ್ ಅಶೋಕ್ ಸಂಬಂಧಿಯಾದ ಎ ರವಿ ಅವರನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ ರವಿ ಕೇವಲ ಪಿಯುಸಿ ಓದಿದ್ದು, ಪದವಿ ಕೂಡ ಪೂರೈಸಿಲ್ಲ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕವಾಗಲು ತಮ್ಮ ಮನೆ ವಿಳಾಸ ಬದಲಿಸಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಯ ವೇಳೆ ಅಫಿಡವಿಟ್‌ನಲ್ಲಿ ಅವರು ಬೇರೆ ವಿಳಾಸ ನೀಡಿದ್ದರು. ಮುಖ್ಯಮಂತ್ರಿ ಮತ್ತು ಸಚಿವ ಅಶೋಕ್ ಅವರು ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.

ಅಲ್ಲದೆ, ವಿಮಾನ ನಿಲ್ದಾಣದ ಸುತ್ತಲಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಬಹುದೊಡ್ಡ ವ್ಯಾಪ್ತಿಯ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ, ಮಾನ್ಯ ಮಾಡುವ ಅಥವಾ ತಿರಸ್ಕರಿಸುವ ಜವಾಬ್ದಾರಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಹೊಂದಿದೆ. ಇಂತಹ ಪ್ರಾಧಿಕಾರಕ್ಕೆ ಕನಿಷ್ಠ ಅರ್ಹತೆ ಇಲ್ಲದ ವ್ಯಕ್ತಿಯನ್ನು ರಾಜಕೀಯ ಕಾರಣಗಳಿಗಾಗಿ ನೇಮಕ ಮಾಡಿದೆ. ಹಾಗಾಗಿ, ರವಿ ಅವರ ನೇಮಕಾತಿ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಅರ್ಜಿದಾರರ ಪರ ವಕೀಲ ಎಸ್‌ ಉಮಾಪತಿ ವಾದಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com