ಡಿಸೆಂಬರ್ ಗೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ
ಮುಖ್ಯಮಂತ್ರಿ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬೆಂಗಳೂರು ಉಪ ನಗರ ರೈಲು ಯೋಜನೆಯ ಅಡಿಗಲ್ಲು ಸಮಾರಂಭ, ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಹಾಗೂ ಉನ್ನತೀಕರಿಸಿದ ಐಟಿಐಗಳ ಉದ್ಘಾಟನೆ ಹಾಗೂ ಬೆಂಗಳೂರು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಂದಿನ ತಿಂಗಳು  ಹಮ್ಮಿಕೊಳ್ಳಲಾಗಿದೆ. 

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವಂತೆ ಪ್ರಧಾನಿ ಅವರಿಗೆ ಆಹ್ವಾನ ನೀಡಿದ್ದಾರೆ. ಈ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ದಿನಾಂಕವಿನ್ನೂ ನಿಗದಿಯಾಗಿಲ್ಲ. ಪ್ರಧಾನಿಗಳು ಕಾರ್ಯಕ್ರಮಗಳಿಗೆ ಆಗಮಿಸಲು ಬೊಮ್ಮಾಯಿಗೆ ಒಪ್ಪಿಗೆ ಸೂಚಿಸಿದ್ದು, ಡಿಸೆಂಬರ್ ತಿಂಗಳಲ್ಲಿ ಎರಡು ದಿನ ಈ ಕಾರ್ಯಕ್ರಮಗಳನ್ನು ನಿಗದಿಪಡಿಸುವಂತೆ ಪ್ರಧಾನಿಯವರು ತಿಳಿಸಿದ್ದು, ಎರಡು ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಕಾರ್ಯಾಲಯ ನಿಗದಿ ಪಡಿಸಿದ ದಿನಾಂಕಗಳಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪ್ರಧಾನಿಯವರು ವಿಶೇಷವಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಹಾಗೂ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಕ್ರಮಗಳನ್ನು ಶ್ಲಾಘಿಸಿದರು. ರೈತ ವಿದ್ಯಾನಿಧಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಬೇಕು. ಏಕೆಂದರೆ, ಡಿಜಿಟಲ್ ವೇದಿಕೆಯಲ್ಲಿ ರಾಜ್ಯದ ಎಲ್ಲ ರೈತರ ಮಾಹಿತಿ ಲಭ್ಯವಿದೆ. ರಾಜ್ಯದ ಯಶಸ್ಸನ್ನು ಗಮನಿಸಿ ಇತರ ರಾಜ್ಯಗಳಿಗೆ ಈ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗುವುದು ಎಂದು ಪ್ರಧಾನಿಯವರು ಹೇಳಿರುವುದಾಗಿ ಬೊಮ್ಮಾಯಿ ತಿಳಿಸಿದರು. 

 ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಪ್ರಗತಿಯ ಕುರಿತು ಮಾಹಿತಿ ಪಡೆದ ಪ್ರಧಾನಿ,  ವಿಶ್ವವಿದ್ಯಾಲಯಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ನೀತಿಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಅಮೃತ ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಂಯೋಜನೆಗೊಳಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಇದರ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಯ ನೇಮಕ ಮಾಡುವಂತೆ ತಿಳಿಸಿದರು.  ಇದರೊಂದಿಗೆ ಕೌಶಲ್ಯ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಬಲೀಕರಣ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ಹೇಳಿದರು.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕೆ ನೆರವು ನೀಡಲು ಬ್ಯಾಂಕುಗಳು ಹೆಚ್ಚಿನ ಉತ್ಸುಕತೆ ತೋರದಿರುವ ಬಗ್ಗೆ ಪ್ರಧಾನಿಯವರ ಗಮನ ಸೆಳೆದಿದ್ದು, ಹೆಣ್ಣುಮಕ್ಕಳಿಗೆ ಹೆಚ್ಚಿನ ನೆರವು ನೀಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡುವುದಾಗಿ ಹಾಗೂ ರಾಜ್ಯದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಉದ್ಯೋಗ ನೀತಿ ಮೊದಲಾದವುಗಳ ಕುರಿತು ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಸಿಎಂ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com