ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಅಗ್ರಸ್ಥಾನಕ್ಕೆ ಭಾರತ: ಅಶ್ವತ್ಥ ನಾರಾಯಣ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲಿದ್ದು, ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಪಾದಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ
ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲಿದ್ದು, ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಪಾದಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಜಂಟಿಯಾಗಿ ಶನಿವಾರ ಆಯೋಜಿಸಿದ್ದ 'ಉನ್ನತ ಶಿಕ್ಷಣ ಭವಿಷ್ಯದ ಕಾರ್ಯತಂತ್ರ'ಸಮಾವೇಶ ಉದ್ದೇಶಿ ಮಾತನಾಡಿದ ಅವರು, ದೇಶದಲ್ಲಿ 34 ವರ್ಷಗಳ ನಂತರ ಎನ್ ಇಪಿ ಜಾರಿಗೆ ತರಲಾಗುತ್ತಿದ್ದು, ಇದು ನೂರಕ್ಕೆ ನೂರರಷ್ಟು ಸಕಾರಾತ್ಮಕವಾಗಿದೆ ಎಂದು ವಿವರಿಸಿದರು.

ಹಿಂದಿನ ಶಿಕ್ಷಣ ಪದ್ದತಿಯಲ್ಲಿ ಶೇ. 20 ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗಕ್ಕೆ ಅರ್ಹರಾಗುತ್ತಿದ್ದರು. ಆದರೆ, ಈಗ ಕೌಶಲ್ಯ ಮತ್ತು ಡಿಜಿಟಲ್ ಕಲಿಕೆಗೆ ಒತ್ತು ನೀಡಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಉದ್ಯೋಗಕ್ಕೆ ಬೇಕಾದ ಅರ್ಹತೆ ಮತ್ತು ಸಾಮರ್ಥ್ಯಗಳನ್ನು ಪಡೆಯಬಹುದಾಗಿದೆ.  ಎನ್ ಇಪಿಯಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮೊದಲು ಲಾಭವಾಗಲಿದೆ ಎಂದು ಸಚಿವರು ತಿಳಿಸಿದರು.

ಇದಕ್ಕೂ ಮುನ್ನ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ 2021-22ನೇ ಸಾಲಿನ ಪಠ್ಯೇತರ ಚಟುವಟಿಕೆಗಳಿಗೆ  ಚಾಲನೆ ನೀಡಿ ಮಾತನಾಡಿದ ಅಶ್ವತ್ಥ ನಾರಾಯಣ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಂಸ್ಕೃತಿಕ, ದೈಹಿಕ ಶಿಕ್ಷಣ ಮತ್ತು ಪಠ್ಯೇತರ  ಚಟುವಟಿಕೆಗಳಿಗೆ ಒತ್ತು ಕೊಡಲಾಗಿದ್ದು, ಇವೆಲ್ಲವನ್ನೂ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.

ಎನ್ ಇಪಿಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ವಿಕಸನದ ಗುರಿ ಇಟ್ಟುಕೊಳ್ಳಲಾಗಿದೆ. ಬೋಧನಾ ವ್ಯವಸ್ಥೆಯ ಡಿಜಿಟಲೀಕರಣದಿಂದ ಶಿಕ್ಷಣದ ಗುಣಮಟ್ಟ ಸಾಕಷ್ಟು ಸುಧಾರಿಸಲಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com