ಸಂಪೂರ್ಣ ಶಾಲಾರಂಭಕ್ಕೆ ಸರ್ಕಾರ ನಿರ್ಧಾರ: ಹೆಚ್ಚುವರಿ ಬಸ್ ನಿಯೋಜನೆಗೆ ಬಿಎಂಟಿಸಿ ತೀರ್ಮಾನ

ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅ.4ರಿಂದ ಕೋವಿಡ್ ಪೂರ್ವ ಮಾದರಿಯಲ್ಲಿ ದಿನಪೂರ್ತಿ ಭೌತಿಕ ತರಗತಿಗಳನ್ನು ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಮತ್ತು ಸುರಕ್ಷಿತ ಸಾರಿಗೆ ಸೇವೆಯನ್ನು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅ.4ರಿಂದ ಕೋವಿಡ್ ಪೂರ್ವ ಮಾದರಿಯಲ್ಲಿ ದಿನಪೂರ್ತಿ ಭೌತಿಕ ತರಗತಿಗಳನ್ನು ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಮತ್ತು ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರವನ್ನು ಆರಂಭಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಟಿಸಿಯು, ಸಿಲಿಕಾನ್ ಸಿಟಿಯಲ್ಲಿ ಪ್ರಸ್ತುತ 4953 ಬಿಎಂಟಿಸಿ ಬಸ್ ಸಂಚಾರ ನಡೆಸುತ್ತಿದ್ದು, ಅಕ್ಟೋಬರ್ 4ರ ಸೋಮವಾರದಿಂದ ಹೆಚ್ಚುವರಿಯಾಗಿ 100 ಬಸ್ ಸಂಚಾರವನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಸರ್ಕಾರ ವಿಧಿಸಿದ ಕೊರೊನಾವೈರಸ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು, 6 ರಿಂದ 10ನೇ ತರಗತಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ, ತಾಂತ್ರಿಕ ಮತ್ತು ವೈದ್ಯಕೀಯ ಹಾಗೂ ಡಿಪ್ಲೋಮಾ ಇತ್ಯಾದಿ ಕಾಲೇಜುಗಳು ಪುನಾರಂಭಗೊಂಡಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರಮಾಣಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈಗಿರುವ ಬಸ್ ಜೊತೆಗೆ ಹೆಚ್ಚುವರಿ ಬಸ್ ಸಂಚಾರವನ್ನು ಆರಂಭಿಸಲಾಗುವುದು ಎಂದು ಹೇಳಿದೆ. 

ಬೆಂಗಳೂರು ಹಾಗೂ ಹೊರವಲಯದ ಪ್ರದೇಶಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಸಹಜ ಸ್ಥಿತಿಯತ್ತ ಮರಳಿವೆ. ಈ ಮಧ್ಯೆ ಬೇರೆ ಊರುಗಳಿಂದ ಸಿಲಿಕಾನ್ ಸಿಟಿಯತ್ತ ವಾಪಸ್ಸಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ 100 ಹೆಚ್ಚುವರಿ ಬಸ್ ಸಂಚಾರ ಆರಂಭಿಸಲಾಗುತ್ತಿದೆ ಎಂದು ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ನಗರದಲ್ಲಿ ಎಸಿ ಬಸ್ ಗಳ ಸೇವೆಯನ್ನೂ ಹೆಚ್ಚಳ ಮಾಡಲು ಚಿಂತನೆಗಳು ನಡೆಯುತ್ತಿವೆ. ಪ್ರಸ್ತುತ 43 ಬಸ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. 

ಬಸ್ ಹತ್ತುವ ಮಕ್ಕಳ ತಮ್ಮ ಶಾಲಾ ಶುಲ್ಕದ ರಶೀದಿ ಅಥವಾ ಗುರುತಿನ ಚೀಟಿ ಅಥವಾ ಹಳೆಯ ಪಾಸ್ ಅನ್ನು ತೋರಿಸಿದರೆ ಮೃದು ವರ್ತನೆ ತೋರುವಂತೆ ಅಧಿಕಾರಿಗಳು ಸೂಚಿಸಿದ್ದಾರೆಂದು ಎಂದು ಬಿಎಂಟಿಸಿ ಬಸ್ ನಿರ್ವಾಹಕರೊಬ್ಬರು ಹೇಳಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com