ಉಪ ಲೋಕಾಯುಕ್ತರ ಹುದ್ದೆಗೆ ನೇಮಕ ಪ್ರಕ್ರಿಯೆ ಆರಂಭ: ನ್ಯಾಯಾಂಗ ನಿಂದನೆ ಕೈ ಬಿಡುವಂತೆ ಹೈಕೋರ್ಟ್ ಗೆ ಸರ್ಕಾರ ಮನವಿ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಮತ್ತೊಂದು ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ಈಚೆಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಮತ್ತೊಂದು ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ಈಚೆಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ.

ಅರ್ಜಿದಾರ ವಕೀಲ ಎಸ್ ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜನವರಿ 27ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿತ್ತು. ಉಪಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹಾಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು ಅಭಿಪ್ರಾಯ ನೀಡಬೇಕಿರುವುದರಿಂದ ಪ್ರಕರಣದ ವಿಚಾರಣೆಯನ್ನು ಕಳೆದ ಬುಧವಾರ ನ್ಯಾ. ಅಲೋಕ್ ಆರಾಧೆ ಮತ್ತು ನ್ಯಾ. ಹೇಮಂತ್ ಚಂದನಗೌಡರ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವಿಚಾರಣೆಯಲ್ಲಿ ಭಾಗಿಯಾಗಿದ್ದ ಹೆಚ್ಚುವರಿ ಸರ್ಕಾರಿ ವಕೀಲ ಧ್ಯಾನ್ ಚಿನ್ನಪ್ಪ ಅವರು, ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ರಾಜ್ಯ ಸರ್ಕಾರವು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಸರ್ಕಾರ ಕೈಗೊಂಡ ನಿರ್ಧಾರವನ್ನು ದಾಖಲೆಯಲ್ಲಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು. ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪಿ ಹೇಮಲತಾ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಪಾಲನಾ ವರದಿಯನ್ನು ಸಲ್ಲಿಸಲಾಗಿದೆ  ಎಂದು ಪೀಠಕ್ಕೆ ವಿವರಿಸಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಪೀಠವು ನವೆಂಬರ್ 8ಕ್ಕೆ ಮುಂದೂಡಿತು.

ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್ ಆನಂದ್ ಅವರು ಕಳೆದ ವರ್ಷದ ಡಿಸೆಂಬರ್ 16 ರಂದು ನಿವೃತ್ತರಾಗಿದ್ದಾರೆ. ಈ ಸಂಬಂಧ ಅವರ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಜನವರಿ 27ರಂದು ಹೈಕೋರ್ಟ್ ಆದೇಶಿಸಿತ್ತು. ಕೋವಿಡ್ ಸಂದರ್ಭದಲ್ಲಿ ಇಡೀ ಆಡಳಿತ ಯಂತ್ರವನ್ನು ಕೊರೊನಾ ವೈರಸ್ ನಿಯಂತ್ರಿಸಲು ನಿಯೋಜಿಸಿದ್ದರಿಂದ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ. ಉಪ ಲೋಕಾಯುಕ್ತರನ್ನು ನೇಮಿಸುವ ಪ್ರಕ್ರಿಯೆ ಆರಂಭಿಸಿರುವುದರಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು ಎಂದು ಮನವಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com