ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರ ತಪ್ಪಿಲ್ಲ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರ ತಪ್ಪಿತಸ್ಥರಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
Published: 23rd October 2021 09:29 AM | Last Updated: 23rd October 2021 09:29 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರ ತಪ್ಪಿತಸ್ಥರಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.
2019ರ ಡಿಸೆಂಬರ್ 19ರಂದು ನಡೆದಿದ್ದ ಹಿಂಸಾಚಾರದಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಪ್ರಕರಣದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶಿಸಿತ್ತು.
ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಬಗ್ಗೆ ವಿವರ ಸಲ್ಲಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ‘ಈ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಪೊಲೀಸ್ ಸಿಬ್ಬಂದಿ ವಿರುದ್ಧದ ಆರೋಪಗಳನ್ನು ಕೂಡ ವಿಚಾರಣೆ ಮಾಡಲಾಗಿದೆ’ ಎಂದು ಹೇಳಿದರು.
ಜುಲೈ 26ರ ವಿಚಾರಣೆ ವೇಳೆ ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದ್ದ ಸರ್ಕಾರ, ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಮಯಾವಕಾಶ ಕೋರಿತ್ತು.
ಅರ್ಜಿದಾರರ ಪರ ಹಾಜರಿದ್ದ ವಕೀಲ ಪ್ರೊ. ರವಿವರ್ಮ ಕುಮಾರ್, ‘ಪೊಲೀಸರ ವಿರುದ್ಧ ಕನಿಷ್ಠ 10 ದೂರುಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಒಂದನ್ನೂ ತನಿಖೆ ಮಾಡಿಲ್ಲ. ಹೈಕೋರ್ಟ್ ಸೂಚಿಸಿದ್ದರೂ, ಎಫ್‌ಐಆರ್ ದಾಖಲಿಸಿಲ್ಲ’ ಎಂದು ಹೇಳಿದರು.
ನ್ಯಾಯಾಲಯ ನೀಡಿದ ಆದೇಶಗಳನ್ನು ಪಾಲಿಸಿರುವ ಬಗ್ಗೆ ಅನುಸರಣಾ ವರದಿ ಒಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು.
ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಇತ್ತೀಚೆಗೆ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮತ್ತು ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಸ್ಥಳೀಯ ಪೊಲೀಸರು ಪಕ್ಷಪಾತ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ನಿರೀಕ್ಷೆಯಲ್ಲಿ 2019ರ ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ಪೊಲೀಸರು ಜಾರಿಗೊಳಿಸಿದ್ದರು. ಅಂದು ನಡೆದ ಗುಂಡಿನ ದಾಳಿಯಲ್ಲಿ ಜಲೀಲ್ ಮತ್ತು ನೌಸೀನ್ ಎಂಬುವವರು ಮೃತಪಟ್ಟಿದ್ದರು.