ಕನ್ನಡ ಕಲಿಕೆ ಕಡ್ಡಾಯ ನೀತಿ ಮರುಪರಿಶೀಲನೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಸಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಸಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ ಹಾಗೂ ನ್ಯಾ. ಸಚಿನ್ ಶಂಕರ್ ಮಗದುಮ್ ರವರ ಪೀಠ ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಇಂತಹ ಆದೇಶಗಳನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸೂಕ್ತವಲ್ಲ. ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸಲಹೆ ನೀಡಿದೆ.

ಇದೇ ವೇಳೆ ಸರ್ಕಾರದ ಕ್ರಮ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ, ಶಾಸ್ತ್ರೀಯವಾದ ಕನ್ನಡ ಕಲಿಯುವಂತೆ ಆದೇಶದಲ್ಲಿ ಸೂಚಿಸಲಾಗಿಲ್ಲ. ಸಾಮಾನ್ಯ ಕನ್ನಡವನ್ನು ಕಲಿಸುವ ಉದ್ದೇಶದಿಂದ ಸರ್ಕಾರ ಆದೇಶ ನೀಡಿದೆ. ಸರ್ಕಾರದ ಕ್ರಮ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಆಕ್ಷೇಪಣೆ ಸಲ್ಲಿಸುವುದಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಹೈಕೋರ್ಟ್​ನಲ್ಲಿ ವಾದ ಮಂಡಿಸಿದರು. ಆದರೆ, ಸರ್ಕಾರದ ವಾದವನ್ನು ಹೈಕೋರ್ಟ್ ಒಪ್ಪಲಿಲ್ಲ. ಬದಲಿಗೆ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಸಲಹೆ ನೀಡಿದೆ.

2020ರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡಿರುವ ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿದೆ. 2021-22 ರ ಸಾಲಿನ ಪದವಿ ತರಗತಿಗಳ ನಾಲ್ಕು ಸೆಮಿಸ್ಟರ್​ಗಳಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 7, ಸೆಪ್ಟೆಂಬರ್ 25 ರಂದು ಎರಡು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಎರಡು ಭಾಷೆಗಳ ಪೈಕಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಬೇಕೆಂದು ಸೂಚಿಸಿದೆ. ಕನ್ನಡ ಮತ್ತು ಕನ್ನಡೇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪಠ್ಯಪುಸ್ತಕಗಳನ್ನೂ ಒದಗಿಸಲಾಗಿದೆ. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿರುವ ಅರ್ಜಿದಾರರು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದರಿಂದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ಹಲವು ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಕನ್ನಡ ಕಲಿತಿರುವುದಿಲ್ಲ. ಆದರೆ ಪದವಿ ಸೇರಿದ ಕೂಡಲೇ ಕನ್ನಡ ಕಲಿಯಬೇಕೆಂದು ಕಡ್ಡಾಯಗೊಳಿಸುವುದು ಸರಿಯಲ್ಲ. ನಮ್ಮ ರಾಜ್ಯವಲ್ಲದೇ, ಹೊರ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಸರ್ಕಾರದ ಕ್ರಮದಿಂದ ಈ ಎಲ್ಲಾ ವಿದ್ಯಾರ್ಥಿಗಳೂ ತೊಂದರೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಆಯ್ಕೆ ಆಧರಿತ ಶಿಕ್ಷಣ ಕ್ಕೆ ಅವಕಾಶ ಕಲ್ಪಿಸಲಾಗಿದೆಯೇ ಹೊರತು ಕನ್ನಡ ಕಲಿಕೆ ಕಡ್ಡಾಯಗೊಳಿಸಲು ಶಿಫಾರಸು ಮಾಡಲಾಗಿಲ್ಲ. ಹೀಗಿರುವಾಗ ಸರ್ಕಾರದ ಆದೇಶ ಏಕಪಕ್ಷೀಯವಾಗಿದೆ. ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಹಾಗೂ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ. ಹೀಗಾಗಿ ಕನ್ನಡ ಕಲಿಕೆ ಕಡ್ಡಾಯ ಆದೇಶ ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ವಾದಿಸಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com