ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ
ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
Published: 06th September 2021 06:26 PM | Last Updated: 06th September 2021 07:43 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ
ಬೆಂಗಳೂರು: ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ.
ಎರಡು ಹಂತಗಳಲ್ಲಿ ಹುದ್ದೆಗಳ ಸೃಜನೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಎಸ್.ಪಿ ಕಚೇರಿ, ಜಿಲ್ಲಾ ಆರೋಗ್ಯಾಧಿಕಾರಿ, ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ, ನಗರ ಯೋಜನೆ ಹಾಗೂ ಅರಣ್ಯ ಇಲಾಖೆಗಳ ಕಚೇರಿಗಳನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಂತ ಹಂತವಾಗಿ ಎಲ್ಲ ಕಚೇರಿಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದರಲ್ಲಿ ಕೆಲವು ಹುದ್ದೆಗಳನ್ನು ಬಳ್ಳಾರಿಯಿಂದ ಸ್ಥಳಾಂತರ ಮಾಡುವ ಮೂಲಕ ಹಾಗೂ ಕೆಲವು ಹುದ್ದೆಗಳ ಸೃಜನೆಯ ಮೂಲಕ ಜಿಲ್ಲಾ ಮಟ್ಟದ ಕಚೇರಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಜಿಲ್ಲಾ ಕಚೇರಿಗಳ ನಿರ್ಮಾಣಕ್ಕೆ ಕರ್ನಾಟಕ ಗೃಹಮಂಡಳಿಯ83 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು ಅನುದಾನವನ್ನು ಎರಡು ಹಂತದಲ್ಲಿ ವರ್ಗಾಯಿಸಲಾಗುವುದು ಎಂದು ಅವರು ತಿಳಿಸಿದರು.
ಅನಗತ್ಯ ಸ್ಥಳ ವ್ಯರ್ಥ ಮಾಡದೆ, ಕಾರ್ಯನಿರ್ವಹಣೆಗೆ ಪೂರಕವಾಗಿ ಸುಸಜ್ಜಿತ ಜಿಲ್ಲಾಡಳಿತ ಭವನದ ನಕ್ಷೆ ರೂಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಬಳ್ಳಾರಿ ಜಿಲ್ಲೆಯ ಜಿಲ್ಲಾ ಖನಿಜ ನಿಧಿಗೆ ಸಂಬಂಧಿಸಿದಂತೆ ಈಗಾಗಲೇ 2023-24ರ ವರೆಗೆ ಅನುಮೋದನೆಯಾಗಿರುವ ಕ್ರಿಯಾಯೋಜನೆಯನ್ನು ಜಾರಿಗೊಳಿಸಲಾಗುವುದು. ನಂತರ ಜಿಲ್ಲಾ ಖನಿಜ ನಿಧಿಯನ್ನು ಎರಡೂ ಜಿಲ್ಲೆಗಳ ನಡುವೆ ಹಂಚಿಕೆ ಮಾಡುವ ಕುರಿತು ಒಂದು ಸೂತ್ರ ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ವಿಫುಲ ಅವಕಾಶವಿದ್ದು, ಹಂಪಿಯಲ್ಲಿ ಹಾಗೂ ಮತ್ತಿತರ ಪಾರಂಪರಿಕ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಆರ್ಕಿಯಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಲೋಕೋಪಯೋಗಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಿಜಯನಗರ ಜಿಲ್ಲೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಪಿ. ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.