ಗದಗ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಶೂನ್ಯ ಕೊರೋನಾ ಪ್ರಕರಣ

ಗದಗದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಇಳಿಕೆಯಾಗಿದ್ದು, ಜಿಲ್ಲೆಯಲ್ಲಿ ಕಳೆದ 1 ವಾರದಿಂದ ಶೂನ್ಯ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಗದಗ: ಗದಗದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಇಳಿಕೆಯಾಗಿದ್ದು, ಜಿಲ್ಲೆಯಲ್ಲಿ ಕಳೆದ 1 ವಾರದಿಂದ ಶೂನ್ಯ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ.

ಕೇವಲ ಸೋಂಕು ಅಷ್ಟೇ ಅಲ್ಲದೆ, ಸಾವಿನ ಪ್ರಮಾಣ ಕೂಡ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಒಂದೂ ಸಾವು ವರದಿಯಾಗಿಲ್ಲ.

ಇದಕ್ಕೂ ಮುನ್ನ ಜಿಲ್ಲೆಯಲ್ಲಿ ಪ್ರತೀನಿತ್ಯ 1 ಅಥವಾ 2 ಸೋಂಕುಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ, ಕಳೆದ ಒಂದು ವಾರದಿಂದ ಶೂನ್ಯ ಪ್ರಕರಣಗಳು ದಾಖಲಾಗಿವೆ. ಇನ್ನು ಜಿಲ್ಲೆಯಲ್ಲಿ ಕೇವಲ 9 ಸಕ್ರಿಯ ಪ್ರಕರಣಗಳಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸೆಪ್ಟೆಂಬರ್ 3 ರಂದು ಜಿಲ್ಲೆಯಲ್ಲಿ 4 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಅದಾದ ಬಳಿಕ ಸೆಪ್ಟೆಂಬರ್ 4-10ರವಗೆ ಒಂದೂ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು ಆಗಸ್ಟ್ 5 ರಂದು ವರದಿಯಾಗಿದ್ದ ಸಾವುಗಳು ತದನಂತರದ ದಿನಗಳಲ್ಲಿ ಶೂನ್ಯಕ್ಕಿಳಿದಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. 

ಗ್ರಾಮೀಣ ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ಸೋಂಕು ಪ್ರಮಾಣ ಇಳಿಕೆಯಾಗಿದ್ದು, 50 ಗ್ರಾಮಗಳಲ್ಲಿನ ಸಂಪೂರ್ಣ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸೋಂಕು, ಸಾವಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದರೂ, 3ನೇ ಅಲೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿ ಸಿದ್ಧತೆ ಆರಂಭಿಸಿವೆ. 

ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇರಿಸಿದ್ದಾರೆ. 

ಉಪ ಆಯುಕ್ತ ಸುಂದರೇಶ್ ಬಾರು ಅವರು, ತುರ್ತು ಪರಿಸ್ಥಿತಿ ಎದುರಿಸಲು ಔಷಧಿ ಹಾಗೂ ವೆಂಟಿಲೇಟರ್ ಜೊತೆಗೆ ಹಾಸಿಗೆಗಳ ವ್ಯವಸ್ಥೆಯನ್ನು ಹೆಚ್ಚಿಸುವಂತೆ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. 

ಜಿಲ್ಲಾ ಕಣ್ಗಾವಲು ಅಧಿಕಾರಿ ಜಗದೀಶ್ ನುಚ್ಚಿನ್ ಅವರು ಮಾತನಾಡಿ, ಶುಕ್ರವಾರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.0.06ರಷ್ಟಿತ್ತು. ಕೋವಿಡ್ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com