ಅಂತರ್ಜಲಕ್ಕೆ ಒತ್ತು ಸೇರಿದಂತೆ ವಿಧಾನಸಭೆಯಲ್ಲಿ ಹತ್ತು ವಿಧೇಯಕ ಅಂಗೀಕಾರ
ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ, ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ತಿದ್ದುಪಡಿ ವಿಧೇಯಕ ಸೇರಿದಂತೆ ವಿಧಾನಸಭೆಯಲ್ಲಿ ಮಂಗಳವಾರ ಹತ್ತು ವಿಧೇಯಕಗಳನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.
Published: 15th September 2021 01:20 PM | Last Updated: 15th September 2021 02:08 PM | A+A A-

ವಿಧಾನಸಭೆಯಲ್ಲಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ, ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ತಿದ್ದುಪಡಿ ವಿಧೇಯಕ ಸೇರಿದಂತೆ ವಿಧಾನಸಭೆಯಲ್ಲಿ ಮಂಗಳವಾರ ಹತ್ತು ವಿಧೇಯಕಗಳನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.
ಮಳೆ ನೀರನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ 2020-21ನೇ ಸಾಲಿನ ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ತಿದ್ದುಪಡಿ ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಚಿವ ಮಾಧುಸ್ವಾಮಿಯವರು ಮಂಡಿಸಿದರು. ಈ ಮಂಡನೆಯನ್ನು ಸಭೆಯು ಧ್ವನಿಮತದಿಂದ ಅಂಗೀಕರಿಸಿತು.
ಈ ತಿದ್ದುಪಡಿ ವಿಧೇಯಕವು ಕಾವೇರಿ ನೀರು ಅಥವಾ ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು, ಮಳೆ ನೀರು ಒಳಚರಂಡಿಗಳಲ್ಲಿ ಹರಿದು ಹೋಗುವುದನ್ನು ತಗ್ಗಿಸುವುದು,ನಗರ ಪ್ರವಾಹವನ್ನು ಇಳಿಸುವುದು, ಅಂತರ್ಜಲದ ಮಾಲಿನ್ಯ ಮೂಲವನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ.
ಇದೇ ಸಂದರ್ಭದಲ್ಲಿ ಬಂಧಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2021, ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕ, 2021, ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕ 2021, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ, 2021, ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ, 2021, ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, 2021, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2021, ಕರ್ನಾಟಕ ಸ್ಟಾಂಪು ತಿದ್ದುಪಡಿ ವಿಧೇಯಕ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಗಳು ಅಂಗೀಕಾರವಾಗಿದೆ.