ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ: ಆರ್. ಅಶೋಕ್

ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳನ್ನು ಸಕ್ರಮ ಮಾಡಿಕೊಡುವಂತೆ ಕೂಡಲೇ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು.
ಸಚಿವ ಆರ್.ಅಶೋಕ್
ಸಚಿವ ಆರ್.ಅಶೋಕ್

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳನ್ನು ಸಕ್ರಮ ಮಾಡಿಕೊಡುವಂತೆ ಕೂಡಲೇ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ, ಲಾಲಾಜಿ ಮೆಂಡನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದು ಕೇವಲ ಒಂದು ವಿಧಾನಸಭೆ ಕ್ಷೇತ್ರಕ್ಕೆ ಸೀಮಿತವಾದ ಸಮಸ್ಯೆಯಲ್ಲ. ರಾಜ್ಯದ 224 ಕ್ಷೇತ್ರಗಳಲ್ಲೂ ಒಂದಲ್ಲಾ ಒಂದು ರೀತಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಈಗಾಗಲೇ ಸ್ವೀಕರಿಸಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲು 2023 ಮಾರ್ಚ್ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ ಎಂದರು.

ಈ ಹಂತದಲ್ಲಿ ಕಾಂಗ್ರೆಸ್, ಜೆಡಿಎಸ್.ಬಿಜೆಪಿ ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಆಗುತ್ತಿರುವ ತೊಂದರೆಗಳನ್ನು ಸರ್ಕಾರದ ಗಮನಕ್ಕೆ ತಂದರು. ಕೇವಲ ಮನೆ ಕಟ್ಟಿದ ಜಾಗವನ್ನು ಮಾತ್ರ ಸಕ್ರಮ ಮಾಡದೇ ಮನೆಯ ಸುತ್ತ ಮುತ್ತ ಬಿಟ್ಟಿರುವ ಖಾಲಿ ಜಾಗವನ್ನು ಸಕ್ರಮ ಮಾಡಿಕೊಡಬೇಕು ಎಂದು ಸದಸ್ಯರು ಪಟ್ಟು ಹಿಡಿದು ಒತ್ತಾಯಿಸಿದರು.

ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸಮೀಕ್ಷೆ ಮಾಡಿರುವ ಪ್ರಕಾರ, 9 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಎಂದು ಘೋಷಿಸಿದೆ. ಈಗಾಗಲೇ ಎರಡೂ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಾತುತೆ ಮಾಡಿದ್ದು, ಆರು ಲಕ್ಷ ಹೆಕ್ಟೇರ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ಸು ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದು, ಈ ಸಂಬಂಧ ತಕ್ಷಣವೇ ಸುಪ್ರೀಮ್ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸುವುದಾಗಿ ಬಡವರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com