ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಬಳಕೆ: ಮುಖ್ಯಮಂತ್ರಿ ಸಲಹೆ

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಫ್ಲಿಪ್ ಕಾರ್ಟ್ ಸಂಸ್ಥೆಯ ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ರಜನೀಶ್ ಕುಮಾರ್ ಅವರು ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಫ್ಲಿಪ್ ಕಾರ್ಟ್ ಸಂಸ್ಥೆಯ ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ರಜನೀಶ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಇಂದು ತಮ್ಮನ್ನು ಭೇಟಿಯಾದ ಫ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಫ್ಲಿಪ್ ಕಾರ್ಟ್ ಸಂಸ್ಥೆಯು ರಾಜ್ಯದಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಿರುವುದಲ್ಲದೆ, ರೈತರು, ಸಣ್ಣ ಉತ್ಪಾದಕರಿಗೆ, ಕರಕುಶಲ ವಸ್ತುಗಳ ವ್ಯಾಪಾರಕ್ಕೆ ಅವಕಾಶ ಒದಗಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರಿಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯೊಂದಿಗೆ ಇ-ಕಾಮರ್ಸ್ ವೇದಿಕೆ ಮೂಲಕ ಮಾರುಕಟ್ಟೆಯ ಬೇಡಿಕೆಗಳ ಕುರಿತು ಮಾಹಿತಿಯೂ ದೊರೆಯುವಂತಿರಬೇಕು. ಇದರಿಂದ ಅವರಿಗೆ ಅನುಕೂಲವಾಗುವುದು ಎಂದು ನುಡಿದರು.

ರಾಜ್ಯದಲ್ಲಿ ಕೃಷಿ ಉತ್ಪನ್ನಗಳು, ಕರಕುಶಲ ಕರ್ಮಿಗಳು, ನೇಕಾರರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಸಲಹೆ ನೀಡಿದರು. ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿರುವ ರಾಜ್ಯದಲ್ಲಿ ಕಾಫಿ, ಸಂಬಾರ ಪದಾರ್ಥಗಳು, ಜೋಳ, ಎಣ್ಣೆ ಬೀಜ, ತೃಣಧಾನ್ಯಗಳು ಹೀಗಿ ವೈವಿಧ್ಯಮಯ ಉತ್ಪನ್ನಗಳು ಲಭ್ಯವಿದೆ. ಇವುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕೈಜೋಡಿಸುವಂತೆ ಸಲಹೆ ನೀಡಿದರು. ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ತಿಳಿಸಿದರು.

ರಾಜ್ಯದಲ್ಲಿ ಉದ್ಯೋಗ ನೀತಿ ರೂಪಿಸುವ ಮೂಲಕ ಉದ್ಯೋಗ ಸೃಜನೆ ಆಧರಿಸಿ ವಾಣಿಜ್ಯೋದ್ಯಮಗಳಿಗೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು. ಇದು ದೇಶದಲ್ಲೇ ಮೊದಲ ಪ್ರಯತ್ನ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಕಾರ್ಯದರ್ಶಿ ಗಿರೀಶ್ ಹೊಸೂರ್ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com