ಕೋವಿಡ್ ಎಫೆಕ್ಟ್: ಈ ವರ್ಷ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ- ಸಚಿವ ಅಶ್ವತ್ಥ್ ನಾರಾಯಣ್

ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸ್'ನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸ್'ನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಕರ್ನಾಟಕ ಅನುದಾನರಿಹತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘದ ಪ್ರತಿನಿಧಿಗಳ ಜೊತೆ ಬುಧವಾರ ಸಚಿವರು ವಿಕಾಸಸೌಧದಲ್ಲಿ ಸಭೆ ನಡೆಸಿ ಮಾತನಾಡಿದರು. 

ಸಭೆ ಬಳಿಕ ಮಾತನಾಡಿರುವ ಅವರು, ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡದಿರುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಈ ಮೊದಲಿನಂತೆಯೇ ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ.65,340 ಹಾಗೂ ರೂ.58,806 ಈ ಎರಡೂ ಸ್ಲ್ಯಾಬ್ ಗಳಲ್ಲಿ ಶುಲ್ಕ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು. 

ಖಾಸಗಿ ಕಾಲೇಜುಗಳ ಇತರೆ ಶುಲ್ಕ ನೆಪದಲ್ಲಿ ಮಿತಿ ಮೀರಿ ಶುಲ್ಕ ಪಡೆದುಕೊಳ್ಳುವುದಕ್ಕೆ ಕಡಿವಾಣ ಹಾಕಿ, ಗರಿಷ್ಠ ಮಿತಿ ರೂ.20 ಸಾವಿರಕ್ಕೆ ನಿಗದಿಪಡಿಸಲಾಗಿದೆ. ಹಲವು ಕಾಲೇಜುಗಳು ರೂ.70 ಸಾವಿರವರೆಗೆ ಶುಲ್ಕ ವಸೂಲಿ ಮಾಡುತ್ತಿವೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದಕ್ಕೆ ಕಾಲೇಜು ಸಂಘದ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆಂದು ಹೇಳಿದರು. 

ಇನ್ನು ಮುಂದೆ ಪ್ರವೇಶ ಶುಲ್ಕ, ಇತರೆ ಶುಲ್ಕ ಕೌಶಲ್ಯ ಶುಲ್ಕ ಇದ್ಯಾವುದನ್ನೂ ನೇರವಾಗಿ ಕಾಲೇಜಿನಲ್ಲಿ ಕಟ್ಟುವಂತಿಲ್ಲ. ಇವೆಲ್ಲವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿಯೇ ಪಾವತಿಸಬೇಕು. 

ಟ್ಯೂಷನ್ ಶುಲ್ಕ ಸೇರಿದಂತೆ ಇತರೆ ಶುಲ್ಕವನ್ನು ಕಟ್ಟಿಸಿಕೊಳ್ಳುವ ಮುನ್ನ ಪ್ರತಿಯೊಂದು ಕಾಲೇಜು ಯಾವ ಉದ್ದೇಶಕ್ಕೆ ಇದನ್ನು ಸ್ವೀಕರಿಸಲಾಗುತ್ತಿದೆ ಎಂಬುದನ್ನು ಕೆಇಎ, ತಾಂತ್ರಿಕ ಶಿಕ್ಷಣ ಇಲಾಖೆ, ವಿಟಿಯುಗಳಿಗೆ ಮಾಹಿತಿ ನೀಡಬೇಕು. ಇದನ್ನು ಕಾಲೇಜುಗಳಲ್ಲಿ ಕಟ್ಟಲು ಅವಕಾಶ ಇರುವುದಿಲ್ಲ. ಕೆಇಎಗೆ ಪಾವತಿಸಬೇಕು. ಜತೆಗೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು. ವಿಶ್ವವಿದ್ಯಾಲಯ ಶುಲ್ಕವನ್ನು ಈ ಮುಂದೆ ಆಯಾ ಕಾಲೇಜಿನಲ್ಲಿ ಪಾವತಿಸಬಹುದಿತ್ತು. ಆದರೆ, ಇನ್ನು ಮುಂದೆ ಅದನ್ನು ಸಹ ಕೆಇಎನಲ್ಲಿಯೇ ಪಾವತಿಸಬೇಕು. ಶುಲ್ಕ ಕಟ್ಟಿಸಿಕೊಳ್ಳುವಲ್ಲಿ ಇದ್ದ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com