ರಾಜ್ಯದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ದಂಡ? ಈ ಬಗ್ಗೆ ಆರೋಗ್ಯ ಆಯುಕ್ತರು ನೀಡಿದ ಮಾಹಿತಿ ಇಲ್ಲಿದೆ...
ಬೆಂಗಳೂರು: ಕೋವಿಡ್ ಪ್ರಕರಣಗಳು, ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೊದಲ ಹೆಜ್ಜೆಯಾಗಿ, ಆರೋಗ್ಯ ಸೌಧ ಮತ್ತು ಅದರ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲು ಆರೋಗ್ಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಸೌಧದ ಹೌಸ್ ಕೀಪಿಂಗ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗೆ ಮತ್ತು ಸೌಧಕ್ಕೆ ಭೇಟಿ ನೀಡುವ ಇತರರಿಗೆ ಈ ನಿಯಮ ಅನ್ವಯಿಸುತ್ತದೆ.
'ರಾಜ್ಯದಾದ್ಯಂತ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಕಾಲೇಜುಗಳ ಇತರ ಎಲ್ಲಾ ಕಚೇರಿಗಳಲ್ಲಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ನಾವು ನಿರ್ದೇಶನ ನೀಡಿದ್ದೇವೆ. ಪ್ರಕರಣಗಳ ಸಂಖ್ಯೆ ಹೆಚ್ಚಳದ ಆಧಾರದ ಮೇಲೆ ಸಾರ್ವಜನಿಕರಿಗೂ ದಂಡ ವಿಧಿಸುತ್ತೇವೆ' ಎಂದು ಹೇಳಿದರು.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ, ಜೂನ್‌ನಲ್ಲಿ ಆರೋಗ್ಯ ಆಯುಕ್ತರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಅವರಿಗೆ ಪ್ರಸ್ತಾವನೆಯನ್ನು ಕಳುಹಿಸಿದ್ದು, ಬಿಬಿಎಂಪಿ ವ್ಯಾಪ್ತಿ ಮತ್ತು ಬೆಂಗಳೂರು ಜಿಲ್ಲೆಯಲ್ಲಿ ಮಾತ್ರ ಕಡ್ಡಾಯ ಮಾಸ್ಕ್ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಶಿಫಾರಸು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.