ಚಾಮರಾಜಪೇಟೆ ಮೈದಾನಕ್ಕೆ ಭೇಟಿ; ಸರ್ಕಾರದ ವತಿಯಿಂದ ಧ್ವಜಾರೋಹಣಕ್ಕೆ ಸರ್ವ‌ಸಿದ್ಧತೆ: ಸಚಿವ ಆರ್ ಅಶೋಕ್

ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಸರ್ಕಾರ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್‌.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರಿಶೀಲನೆ ನಡೆಸುತ್ತಿರುವ ಅಶೋಕ್
ಪರಿಶೀಲನೆ ನಡೆಸುತ್ತಿರುವ ಅಶೋಕ್
Updated on

ಬೆಂಗಳೂರು: ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಸರ್ಕಾರ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್‌.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಾಧ್ಯಮದೊಂದಿಗೆ ಮಾತನಾಡಿದ ಆರ್ ಅಶೋಕ, ಇದೇ ಮೊದಲ ಬಾರಿಗೆ ಚಾಮರಾಜಪೇಟೆಯ ಸರ್ವೆ ನಂ‌ 40 ಗುಟ್ಟಳ್ಳಿಯಲ್ಲಿ ಧ್ವಜಾರೋಹಣ ನಡೆಯಲಿದೆ. ಬೆಂಗಳೂರು ಉತ್ತರ ವಿಭಾಗದ ಉಪವಿಭಾಗಾಧಿಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರು, ಸಂಸದರು ಮಾತ್ರ ವೇದಿಕೆ ಏರಲು ಅವಕಾಶವಿದ್ದು, ಸಂಘಸಂಸ್ಥೆಗಳು, ಸಾರ್ವಜನಿಕರು, ಸಂಘಟನೆಗಳು ಕಾರ್ಯಕ್ರಮದಲ್ಲಿ ಶಾಂತಿಯುತವಾಗಿ ಭಾಗವಹಿಸಲು ಮುಕ್ತ ಅವಕಾಶ ಇದೆ ಎಂದರು. ಸಾರ್ವಜನಿಕರು‌ ಶಾಂತಿ ಕಾಪಾಡುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು. ಇದಕ್ಕೂ ಮೊದಲು ಸ್ಥಳ ಪರಿಶೀಲನೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್, ಬಿಬಿಎಂಪಿ, ಗೃಹ, ಕಂದಾಯ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ಕೊಟ್ಟು ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

'ಮೈದಾನವು ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೆ ಕಡ್ಡಾಯವಾಗಿ ಕಂದಾಯ ಇಲಾಖೆಯ ಅನುಮತಿ ಪಡೆಯಬೇಕು. ಮಕ್ಕಳು ಆಟವಾಡುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಧ್ವಜಾರೋಹಣ ಕಾರ್ಯಕ್ರಮಕ್ಕೆ 500 ಮಕ್ಕಳು ಕೂಡ ಭಾಗವಹಿಸಿ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬರುವವರು ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಬಿಟ್ಟು ಬೇರೆ ಯಾವ ಘೋಷಣೆಯನ್ನು ಕೂಗುವಂತಿಲ್ಲ. ಒಂದು ವೇಳೆ ಯಾರಾದರೂ ಅನುಚಿತವಾಗಿ ವರ್ತಿಸಿ ಕಾನೂನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಗೃಹ ಇಲಾಖೆಯವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ನಾವೆಲ್ಲ ಭಾರತೀಯರಾಗಿದ್ದು, ಸುವರ್ಣ ಸಂಭ್ರಮದ ಈ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಲು ಯಾರೊಬ್ಬರೂ ಗೊಂದಲ ಸೃಷ್ಟಿಸುವ ಸಾಧ್ಯತೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ಸದಸ್ಯರು ಆಗಮಿಸಿ, ಸರ್ಕಾರದ ವತಿಯಿಂದ ಧ್ವಜಾರೋಹಣ ಒಳ್ಳೆಯ ನಿರ್ಧಾರ. ಸರ್ಕಾರ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕಾರ್ಯ ಮಾಡುತ್ತಿದೆ. ಇದೊಂದು ಉತ್ತಮ ನಿರ್ಧಾರ, ಶ್ಲಾಘನೀಯ ಕಾರ್ಯ ಎಂದು, ಸಚಿವ ಅಶೋಕ ಅವರಿಗೆ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀನಿವಾಸ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಸಂದೀಪ್‌ ಪಾಟೀಲ್, ಲಕ್ಷ್ಮಣ ನಿಂಬರಗಿ, ಉಪವಿಭಾಗಾಧಿಕಾರಿ ಶಿವಣ್ಣ ಹಾಗೂ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com