ಬೆಂಗಳೂರು : ಮಾನಹಾನಿ ಪ್ರಕರಣದ ಸಂಬಂಧ ವಿಚಾರಣಾಧೀನ ನ್ಯಾಯಾಲಯದ 6 ತಿಂಗಳ ಶಿಕ್ಷೆಯ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ‘ಪಾರಿವಾಳ’ ಪಾಕ್ಷಿಕ ಪತ್ರಿಕೆ ಸಂಪಾದಕ ರವಿಕುಮಾರ್‌ನನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಬಿ.ಎ.ಹರೀಶ್‌ಗೌಡ ಅವರು 2000ನೇ ಸಾಲಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾಗಿದ್ದಾಗ ಪಾರಿವಾಳ ಪತ್ರಿಕೆಯಲ್ಲಿ ಅವರ ಬಗ್ಗೆ ಮಾನಹಾನಿ ಲೇಖನ ಪ್ರಕಟಿಸಲಾಗಿತ್ತು. ಈ ಸಂಬಂಧ ಹರೀಶ್‌ಗೌಡ ಅವರು ನ್ಯಾಯಾಲಯದಲ್ಲಿ ರವಿಕುಮಾರ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.
2002ರಲ್ಲಿ ವಿಚಾರಣಾ (ಟ್ರಯಲ್) ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಿ ಆರೋಪಿ ರವಿಕುಮಾರ್‌ಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿತ್ತು. 2004ರಲ್ಲಿ ಜಿಲ್ಲಾ ಮತ್ತು ಸತ್ರನ್ಯಾಯಾಲಯವು ವಿಚಾರಣಾ ಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿತ್ತು. ಆದರೆ 2013ರಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿ ಮತ್ತೊಮ್ಮೆ ಪ್ರಕರಣವನ್ನು ಪಾಟೀಸವಾಲಿಗೆ ಒಳಪಡಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿತ್ತು.
ಅದರಂತೆ 2017ರಲ್ಲಿ ವಿಚಾರಣಾ ನ್ಯಾಯಾಲಯವು ಹೊರಡಿಸಿದ ಹೊಸ ತೀರ್ಪಿನಲ್ಲಿ ರವಿಕುಮಾರ್‌ಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಈ ವೇಳೆ ದೂರುದಾರ ಹರೀಶ್ ಗೌಡ ಅವರು ಆರೋಪಿಗೆ ಜೈಲು ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅದರಂತೆ ಆರೋಪಿಗೆ ಜೈಲು ಶಿಕ್ಷೆಯನ್ನು 9 ತಿಂಗಳಿಗೆ ವಿಸ್ತರಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪಿನ್ನು ಆರೋಪಿ ರವಿಕುಮಾರ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.
ಇದೀಗ ಈ ಮೇಲ್ಮನವಿಯ ವಿಚಾರಣೆ ಮಾಡಿದ ಹೈಕೋರ್ಟ್, ‘ಇದೊಂದು ಖಾಸಗಿ ದೂರು ಆಗಿರುವುದರಿಂದ ಜೈಲು ಶಿಕ್ಷೆಯನ್ನು ವಿಸ್ತರಿಸಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟು, 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಅದರಂತೆ ಉಪ್ಪಾರಪೇಟೆ ಠಾಣೆ ಪೊಲೀಸರು ರವಿಕುಮಾರ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
Advertisement