ಮಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆಯ ಕಾರ್ಖಾನೆಗಳ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಎಚ್. ಸುರೇಶ್ ಗೆ ಮಂಗಳೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು 4 ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 4 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಪ್ರಸ್ತುತ ಸುರೇಶ್ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದು ಮಂಗಳೂರಿನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದಾಗ ಅಧಿಕಾರ ದುರುಪಯೋಗಪಡಿಸಿಕೊಂಡು ಕಾರ್ಖಾನೆ ಪರವಾನಗಿ ನೀಡಲು, ನವೀಕರಿಸಲು ಹಾಗೂ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದ ಮೇಲೆ ಸುರೇಶ್ ವಿರುದ್ಧ 2016ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮಂಗಳೂರು ಪ್ರಕರಣ ದಾಖಲಿಸಿತ್ತು.
ದಾಳಿ ವೇಳೆ ಎಸಿಬಿ ಅಧಿಕಾರಿಗಳು ಅವರ ಕಚೇರಿ ಮತ್ತು ನಿವಾಸದಲ್ಲಿ ಲೆಕ್ಕಕ್ಕೆ ಸಿಗದ 3,49,515 ರೂಪಾಯಿಯನ್ನು ವಶಪಡಿಸಿಕೊಂಡಿತ್ತು.
ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ ಬಿ ಜಕಾತಿ ಅವರು ಪ್ರಕರಣದ ವಿಚಾರಣೆ ನಡೆಸಿ ಅಧಿಕಾರಿ ತಪ್ಪಿತಸ್ಥರೆಂದು ಪರಿಗಣಿಸಿ ತೀರ್ಪು ನೀಡಿದೆ. ಅಲ್ಲದೆ ಸುರೇಶ್‌ಗೆ 4 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದರು. ಇನ್ನು ಮಂಗಳೂರು ಎಸಿಬಿ ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Advertisement