ಮೀಸಲಾತಿ ಹೆಚ್ಚಳ: ಕೇಂದ್ರದಿಂದ ರಾಜ್ಯ ಬಿಜೆಪಿ ಬಣ್ಣ ಬಯಲು, ಧೈರ್ಯವಿದ್ದರೆ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿಯ ಬಣ್ಣವನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಬಯಲು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿಯ ಬಣ್ಣವನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಬಯಲು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಅವರು ತಿಳಿಸಿದ್ದಾರೆ. 

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಶೇ. 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ ಎಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದರಿಂದ  ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದಿರುವ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಬಿಜೆಪಿಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಶುರು ಮಾಡುವಂತೆ ಮನವರಿಕೆ ಮಾಡಿಕೊಡಬೇಕು, ಇಲ್ಲದಿದ್ದರೆ ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com