ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ: ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಪರಿಶಿಷ್ಟ ಜಾತಿ(ಎಸ್​​ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್​​ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
Published on

ಬೆಳಗಾವಿ: ಪರಿಶಿಷ್ಟ ಜಾತಿ(ಎಸ್​​ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್​​ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ 2022 ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ. 

ಆರು ತಿಂಗಳೊಳಗೆ ಈ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ಅವರು ವರದಿ ನೀಡಿದ್ದರು. ಅದರ ಅನ್ವಯ ಈ ಅಧಿವೇಶನದಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡಿಸಿ, ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಂತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ಪರಿಷತ್ ನಲ್ಲಿ ಅಂಗೀಕಾರ ಪಡೆದ ನಂತರ, ಇದು SC/ST ಪಂಗಡದವರಿಗೆ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ನೇಮಕಾತಿಗಳಲ್ಲಿ ಹೆಚ್ಚಿನ ಮೀಸಲಾತಿಯನ್ನು ಒದಗಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com