ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಪ್ರಸ್ತಾವನೆ ಕೈಬಿಡಲು ಮೈಸೂರು ಜಿಲ್ಲಾಡಳಿತ ನಿರ್ಧಾರ, ಪರಿಸರವಾದಿಗಳಿಗೆ ಜಯ

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪರಿಸರವಾದಿಗಳಿಗೆ ಜಯ ಸಿಕ್ಕಂತಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ
Updated on

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪರಿಸರವಾದಿಗಳಿಗೆ ಜಯ ಸಿಕ್ಕಂತಾಗಿದೆ.

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂಬ ಅಭಿಪ್ರಾಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ವ್ಯಕ್ತವಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬಗ್ಗೆ ಪ್ರಸ್ತಾಪಿಸಿದ್ದರು. ಈ ಸಂಬಂಧ ಇಂದು ನಡೆದ ಸಭೆಯಲ್ಲಿ ರೋಪ್ ವೇ ಬೇಡ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಚಾಮುಂಡೇಶ್ವರಿಯ ದರ್ಶನ ಪಡೆದು ಆಕೆಯ ಕೃಪೆಗೆ ಪಾತ್ರರಾಗಲು ಬೆಟ್ಟಕ್ಕೆ ಆಗಮಿಸುತ್ತಾರೆ. ಇಲ್ಲಿಗೆ ಆಗಮಿಸುವವರು ಬಹುತೇಕರು ಭಕ್ತರು. ಹೀಗಾಗಿ ಬೆಟ್ಟಕ್ಕೆ ತೆರಳಲು ಅವರಿಗೆ ಸಾಕಷ್ಟು ಅನುಕೂಲ ಕಲ್ಪಿಸಿರುವುದರಿಂದ ರೋಪ್ ವೆ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದು ಸಚಿವರು ಹೇಳಿದರು.

ಬೆಟ್ಟಕ್ಕೆ ಪ್ರವಾಸಿಗರಿಗಿಂತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಕಾಲ್ನಡಿಗೆಯಲ್ಲಿ, ವಾಹನಗಳ ಮೂಲಕ ಬೆಟ್ಟಕ್ಕೆ ತೆರಳಲು ಅನುಕೂಲ ಕಲ್ಪಿಸಲಾಗಿದೆ. ಉತ್ತಮ ರಸ್ತೆ ಕೂಡ ಇರುವುದರಿಂದ ರೋಪ್ ವೇ ಬೇಡ ಎಂದು ಸಭೆಯಲ್ಲಿದ್ದವರು ಹೇಳಿದರು. ಪ್ರವಾಸೋದ್ಯಮ ಅಸೋಸಿಯೇಷನ್ ನಿಂದ ಆಗಮಿಸಿದವರು ಮಾತ್ರ ರೋಪ್ ವೇ ಪರವಾಗಿ ಇದ್ದರು ಎಂದು ಮಾಹಿತಿ ನೀಡಿದರು.

ಇದೊಂದು ಧಾರ್ಮಿಕ ಕೇಂದ್ರ ಸಾಹಸ ಪ್ರವೃತ್ತಿ ಇಲ್ಲ. ಮೈಸೂರಿನಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ. ಬೆಟ್ಟ ಪ್ರವಾಸೋದ್ಯಮ ಸ್ಥಳ ಅಲ್ಲ. ಬೆಟ್ಟದಲ್ಲಿ ಸ್ವಚ್ಛತೆ, ಮನೆಗಳ ನಿರ್ಮಾಣಕ್ಕೆ ಕಡಿವಾಣ ಹಾಕುವ ಬಗ್ಗೆ ಕೂಡ ಸಭೆಯಲ್ಲಿ ಪ್ರಸ್ತಾಪವಾಯಿತು. ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕೆಂದು ಕೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಕುಸಿದ ರಸ್ತೆ ಅಭಿವೃದ್ಧಿಗೆ ಇಂದು ಚಾಲನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸೋಮನಾಥಪುರ ದೇವಾಲಯ ಯುನೆಸ್ಕೋ ಪಟ್ಟಿ ಸೇರ್ಪಡೆಗೆ ಶಿಫಾರಸು ಮಾಡಲಾಗಿದೆ. 3.74 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಬಗ್ಗೆ ಚರ್ಚೆಯಾಯಿತು. ನಗರೋತ್ಥಾನದಡಿ 2.15 ಕೋಟಿ ರೂ. ವೆಚ್ಚದಲ್ಲಿ ಪಿರಿಯಾಪಟ್ಟಣ ನಗರ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆಯಾಯಿತು ಎಂದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಜಿ.ಟಿ.ದೇವೇಗೌಡ, ಅಶ್ವಿನ್ ಕುಮಾರ್, ಮೇಯರ್ ಸುನಂದಾ ಪಾಲನೇತ್ರಾ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com