ಬೆಂಗಳೂರು: ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಪ್ರವಾಹದಿಂದಾಗಿ ಎರಡು ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರ ತಾಲೂಕಿನ ಗುಂಡಬಾಳ, ಹಡಿನ ಬಾಳ ಗ್ರಾಮಗಳು ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಅಡಿಕೆ ತೋಟ, ಮನೆಗಳಿಗೆ ನೀರು ನುಗ್ಗಿದೆ. ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದ್ದು, ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ರವಾನಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡಿದ್ದು, 10ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವರದಾ ನದಿ ಪ್ರವಾಹದಿಂದ ಗದ್ದೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ದಾವಣಗೆರೆ ಜಿಲ್ಲೆ ಸಂತೆಬೆನ್ನೂರಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಕುಸಿದಿವೆ. ಇದರೊಂದಿಗೆ ಜಿಲ್ಲೆಯಲ್ಲಿ 120 ಕ್ಕೂ ಹೆಚ್ಚು ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದೆ.
ಈ ಮಧ್ಯೆ ರಾಜ್ಯದ ವಿವಿಧೆಡೆ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಮಂಗಳವಾರದಿಂದ ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ಬೆಳವಾಗಿ ಹಾಗೂ ಹಾಸನ ಜಿಲ್ಲೆಯಲ್ಲಿ ಇಂದು ಯೆಲ್ಲೊ ಆಲರ್ಟ್ ಘೋಷಿಸಲಾಗಿದೆ.
ಕರಾವಳಿ ತೀರದಲ್ಲಿ ಗಂಟೆಗೆ 40 ಕಿಲೋ ಮೀಟರ್ ನಿಂದ 50 ಕಿಲೋ ಮೀಟರ್ ವರೆಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣ ನಾಳೆಯವರೆಗೂ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement