ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಿಷಪ್ ಮೇಲಿನ ಪೋಕ್ಸೋ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ

ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ದಕ್ಷಿಣ ಭಾರತ ಚರ್ಚ್ ಗಳ ಬಿಷಪ್ ಪ್ರಸನ್ನ ಕುಮಾರ್ ಸ್ಯಾಮ್ಯುಯೆಲ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
Published on

ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ದಕ್ಷಿಣ ಭಾರತ ಚರ್ಚ್ ಗಳ ಬಿಷಪ್ ಪ್ರಸನ್ನ ಕುಮಾರ್ ಸ್ಯಾಮ್ಯುಯೆಲ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ನಗರದ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ಮತ್ತು ಆ ಕುರಿತು ವಿಚಾರಣಾ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ರೆವರೆಂಡ್ ಪ್ರಸನ್ನಕುಮಾರ್ ಸ್ಯಾಮ್ಯುಯೆಲ್ ಹೈಕೋರ್ಟ್'ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಹೇಮಂತ ಚಂದಗೌಡರ ಅವರ ಏಕಸದಸ್ಯ ನ್ಯಾಯಪೀಠ, ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆ ಮತ್ತು ದೋಷಾರೋಪ ಪಟ್ಟಿ ಪರಿಶೀಲಿಸಿದಾಗ ಅರ್ಜಿದಾರರ ಪಾತ್ರದ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಲಭ್ಯ ಇಲ್ಲದಿರುವುದು ಗಮನಕ್ಕೆ ಬರುತ್ತದೆ. ತನಿಖಾಧಿಕಾರಿಗಳು ಕೂಡ ಅರ್ಜಿದಾರರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂಬುದಾಗಿ ಹೇಳಿದ್ದಾರೆ. ಆದರೆ, ವಿಚಾರಣಾ ನ್ಯಾಯಾಲಯ ಮಾತ್ರ ಸರ್ಕಾರಿ ಅಭಿಯೋಜಕರ ಮನವಿ ಪರಿಗಣಿಸಿ ಅರ್ಜಿದಾರರಿಗೆ ಸಮನ್ಸ್ ಜಾರಿ ಮಾಡಿರುವುದು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿತು.

ನಂತರ ಪ್ರಸನ್ನಕುಮಾರ್ ವಿರುದ್ಧ ವಿಚಾರಣೆಗಾಗಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್, ಪೊಲೀಸರು ದಾಖಲಿಸಿದ್ದ ಎಫ್ಐಆರ್ ಮತ್ತು ನಗರದ 50ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯದಲ್ಲಿದ್ದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಷಪ್ ರೆವರೆಂಡ್ ಪ್ರಸನ್ನಕುಮಾರ್ ಸ್ಯಾಮ್ಯುಯೆಲ್ ಮತ್ತು ಇತರೆ ನಾಲ್ವರ ವಿರುದ್ಧ ನಗರದ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು 2015ರ ಜ.10ರಂದು ಪೋಕ್ಸೋ ಕಾಯ್ದೆ, ಜೀವ ಬೆದರಿಕೆ, ಅವಮಾನ ಮತ್ತು ಹಲ್ಲೆ ಮಾಡಿದ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com