ತುಮಕೂರು: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್, ಇನ್ಫೋಸಿಸ್ ಟೆಕ್ಕಿ ಸಾವು
ತುಮಕೂರು: ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟೆಕ್ಕಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಸೂರಜ್ ಎನ್'ಜೆ (27) ಎಂದು ಗುರ್ತಿಸಲಾಗಿದೆ. ಇವರು ಬೆಂಗಳೂರಿನ ಪದ್ಮನಾಭನಗರದ ನಿವಾಸಿಯಾಗಿದ್ದು, ನಗರ ಇನ್ಫೋಸಿಸ್ ಸಂಸ್ಥೆಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ನಿನ್ನೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಡುಕಾತಿ ಬೈಕ್ ನಲ್ಲಿ ಬೆಳ್ಳೂರು ಕಡೆಗೆ 150 ಕಿ.ಮೀ ವೇಗದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ವಾಹನ ನಿಯಂತ್ರಣ ಕಳೆದುಕೊಂಡು ಗವಿಮಠದ ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಸೂರಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದುರ್ಘಟನೆ ವೇಳೆ ಸೂರಜ್ ಹಿಂದೆ ಮತ್ತೊಂದು ಬೈಕ್ ನಲ್ಲಿ ಅವರ ಸ್ನೇಹಿತ ಅಜಯ್ ಕೂಡ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ