ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನಕ್ಕೆ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ