ಮೈಸೂರು: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಆಶಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಬರುವ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಬೆಳಗ್ಗೆ 5.30ರಿಂದ ರಾತ್ರಿ 8.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಮಳೆ ಹಿನ್ನೆಲೆಯಲ್ಲಿ ಪೆಂಡಾಲ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲವಾಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ, ಮೈಸೂರು ಬಸ್ ನಿಲ್ದಾಣದಿಂದ ಉಚಿತ ಪ್ರಯಾಣ ವ್ಯವಸ್ಥೆಯಿದೆ ಎಂದರು.
ಆಷಾಡ ಮಾಸದ ಪೂಜೆಗಾಗಿ ಮೈಸೂರಿನ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರಬೇಕು ಅಥವಾ 72 ಗಂಟೆ ಅವಧಿಗೆ ಮುನ್ನ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಈ ಕುರಿತು ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
Advertisement